ಬೆಂಗಳೂರು: ಕ್ರೀಡಾಪಟುಗಳ ಉಜ್ವಲ ಭವಿಷ್ಯಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಸರ್ಕಾರಿ ಉದ್ಯೋಗಗಳಲ್ಲಿ ಕ್ರೀಡಾಪಟುಗಳಿಗೆ ಶೇ. 2ರಷ್ಟು ಮೀಸಲಾತಿ ಕಲ್ಪಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ತಿಳಿಸಲಾಗಿದೆ.
ಸರ್ಕಾರದ ಈ ನಿರ್ಧಾರವನ್ನು ದಕ್ಷಿಣ ಕನ್ನಡ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಅವರು ಸ್ವಾಗತಿಸಿದ್ದು, ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟ ಸಚಿವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಹ್ಯಾಂಡ್ಬಾಲ್, ವಾಲಿಬಾಲ್, ಅಥ್ಲೆಟಿಕ್ಸ್, ಕಬಡ್ಡಿ, ಕುಸ್ತಿ ಸೇರಿದಂತೆ ಒಟ್ಟು 34 ವಿವಿಧ ಕ್ರೀಡೆಗಳಲ್ಲಿ ರಾಜ್ಯ ಅಥವಾ ರಾಷ್ಟ್ರಮಟ್ಟವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗಗಳಲ್ಲಿ ವಿಶೇಷ ಅವಕಾಶ ದೊರೆಯಲಿದೆ ಎಂದು ತಿಳಿಸಲಾಗಿದೆ.
ಈ ನಿರ್ಧಾರವು ವಿದ್ಯಾರ್ಥಿಗಳು ಮತ್ತು ಯುವಜನರು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಪ್ರೇರಣೆ ನೀಡಲಿದೆ. ವಿದ್ಯಾರ್ಥಿಗಳು ಹತ್ತನೇ ತರಗತಿಯಿಂದಲೇ ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು, ಶಾಲಾ, ತಾಲೂಕು, ಜಿಲ್ಲಾ, ವಿಭಾಗ, ರಾಜ್ಯ ಹಾಗೂ ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಸಾಧನೆ ಮಾಡಲು ಪ್ರಯತ್ನಿಸಬೇಕು. ಈ ಸಂದರ್ಭದಲ್ಲಿ ಕ್ರೀಡಾ ಸಾಧನೆಗೆ ಸಂಬಂಧಿಸಿದ ಪ್ರಮಾಣಪತ್ರಗಳು ಮತ್ತು ದಾಖಲೆಗಳನ್ನು ಸುರಕ್ಷಿತವಾಗಿ ಕಾಯ್ದಿರಿಸಿಕೊಳ್ಳುವುದು.ಓದಿನ ಜೊತೆಗೆ ಕ್ರೀಡೆಯಲ್ಲಿಯೂ ಸಾಧನೆ ಮಾಡಿ ಆರೋಗ್ಯ, ಗೌರವ ಮತ್ತು ಉದ್ಯೋಗಾವಕಾಶಗಳನ್ನು ಪಡೆದುಕೊಳ್ಳಿ ಎಂದು ಮಂಜುನಾಥ ಭಂಡಾರಿ ಅವರು ವಿದ್ಯಾರ್ಥಿಗಳು ಹಾಗೂ ಯುವಜನತೆಗೆ ಕರೆ ನೀಡಿದ್ದಾರೆ.
ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಕಲ್ಪಿಸುವ ಈ ಕ್ರಮವು ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವುದರ ಜೊತೆಗೆ ಯುವಜನರಲ್ಲಿ ಕ್ರೀಡೆಯ ಬಗ್ಗೆ ಆಸಕ್ತಿ ಹೆಚ್ಚಿಸಲು ಸಹಕಾರಿಯಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.


