ಮಂಗಳೂರು: ಊರ್ವಸ್ಟೋರ್ ಮಾರುಕಟ್ಟೆಯ ನೂತನ ಕಟ್ಟಡ ನಿರ್ಮಾಣ ಹಾಗೂ ಅಭಿವೃದ್ಧಿ ಕಾರ್ಯಗಳ ಕುರಿತು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಅವರು ಮುಡಾ ಕಚೇರಿಯಲ್ಲಿ ಮಾರುಕಟ್ಟೆಯ ವ್ಯಾಪಾರಸ್ಥರೊಂದಿಗೆ ಸಭೆ ನಡೆಸಿದರು.
ನೂತನ ಮಾರುಕಟ್ಟೆ ನಿರ್ಮಾಣ ಕಾಮಗಾರಿ ಆರಂಭಿಸುವ ಹಿನ್ನೆಲೆಯಲ್ಲಿ ವ್ಯಾಪಾರಸ್ಥರಿಗೆ ತಾತ್ಕಾಲಿಕ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವ ಕುರಿತು ಸಭೆಯಲ್ಲಿ ಪ್ರಮುಖವಾಗಿ ಚರ್ಚಿಸಲಾಯಿತು. ಇದಕ್ಕಾಗಿ ಸೂಕ್ತ ಸ್ಥಳವನ್ನು ಗುರುತಿಸಿ ನಿಗದಿಪಡಿಸುವುದು, ಕಾಮಗಾರಿ ಅವಧಿಯಲ್ಲಿ ವ್ಯಾಪಾರ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಅಗತ್ಯ ವ್ಯವಸ್ಥೆ ಮಾಡುವುದು ಸೇರಿದಂತೆ ವ್ಯಾಪಾರಸ್ಥರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಸಮಾಲೋಚನೆ ನಡೆಸಲಾಯಿತು.
ವ್ಯಾಪಾರಸ್ಥರ ಅಹವಾಲುಗಳನ್ನು ಆಲಿಸಿದ ಸಭೆಯಲ್ಲಿ ಸಮಸ್ಯೆಗಳ ಪರಿಹಾರ ಹಾಗೂ ನೂತನ ಮಾರುಕಟ್ಟೆ ಅಭಿವೃದ್ಧಿ ಕಾರ್ಯಗಳನ್ನು ಸುಗಮವಾಗಿ ಕೈಗೆತ್ತಿಕೊಳ್ಳುವ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಮುಡಾ ಆಯುಕ್ತರು, ಸಹಾಯಕ ಕಾರ್ಯಪಾಲಕ ಅಭಿಯಂತರರು, ಪ್ರಾಧಿಕಾರದ ಅಧಿಕಾರಿಗಳು ಹಾಗೂ ಊರ್ವಸ್ಟೋರ್ ಮಾರುಕಟ್ಟೆಯ ವ್ಯಾಪಾರಸ್ಥರು ಉಪಸ್ಥಿತರಿದ್ದರು



