ಮಂಗಳೂರು: ಕೆಎಸ್ಆರ್ಟಿಸಿ ಬಸ್ ಟಿಕೆಟ್ ದರ ಏರಿಕೆ ಮೂಲಕ ರಾಜ್ಯ ಸರ್ಕಾರ ಜನಸಾಮಾನ್ಯರ ಮೇಲೆ ಮತ್ತಷ್ಟು ಆರ್ಥಿಕ ಹೊರೆ ಹೇರುತ್ತಿದೆ ಎಂದು ಶಾಸಕ ಡಾ. ವೈ. ಭರತ್ ಶೆಟ್ಟಿ ಟೀಕಿಸಿದರು.
ಮಂಗಳೂರು ನಗರ ಉತ್ತರ ಮಂಡಲದ ಬಿಜೆಪಿ ವತಿಯಿಂದ ಅಡ್ಯಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಅಭಿಯಾನದ ಅಂಗವಾಗಿ ಆಯೋಜಿಸಿದ್ದ ಬೃಹತ್ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಚುನಾವಣೆಯ ಸಂದರ್ಭದಲ್ಲಿ ಎಲ್ಲರಿಗೂ ಉಚಿತ, ಉಚಿತ ಎಂದು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ, ಇದೀಗ ಒಂದೊಂದಾಗಿ ದರ ಏರಿಕೆ ಮಾಡುವ ಮೂಲಕ ಜನರಿಂದಲೇ ಹಣ ವಸೂಲಿ ಮಾಡುತ್ತಿದೆ. ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿರುವ ಜನಸಾಮಾನ್ಯರಿಗೆ ಕೆಎಸ್ಆರ್ಟಿಸಿ ಬಸ್ ಟಿಕೆಟ್ ದರ ಏರಿಕೆ ಮತ್ತಷ್ಟು ಹೊರೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಹಾಗೂ ಜನವಿರೋಧಿ ನೀತಿಗಳಿಂದ ಜನರು ಸಂಕಷ್ಟ ಅನುಭವಿಸುವಂತಾಗಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಬದಲು ಅವರ ಮೇಲೆಯೇ ನಿರಂತರ ಹೊರೆ ಹೇರುತ್ತಿರುವ ಸರ್ಕಾರದ ನಿರ್ಧಾರಗಳನ್ನು ಬಿಜೆಪಿ ಸಹಿಸುವುದಿಲ್ಲ. ಜನರ ಧ್ವನಿಯಾಗಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಬಿಜೆಪಿಯ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ಶಾಸಕ ಭರತ್ ಶೆಟ್ಟಿ ಎಚ್ಚರಿಸಿದರು.




