ಬೆಂಗಳೂರು: ದೇಶದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಜನ್ಮದಿನದ ಅಂಗವಾಗಿ ಆಚರಿಸಲಾಗುವ ಮಕ್ಕಳ ದಿನಾಚರಣೆಯ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಮಕ್ಕಳ ಗ್ರಾಮಸಭೆ ಆಯೋಜಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಬಿ. ಖಂಡ್ರೆ ಸೂಚನೆ ನೀಡಿದ್ದಾರೆ.
ಈ ಸಂಬಂಧ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಿಗೆ ಲಿಖಿತ ಸೂಚನೆ ನೀಡಿರುವ ಸಚಿವರು, 2006ರಲ್ಲಿಯೇ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ವತಿಯಿಂದ ಮಕ್ಕಳ ಗ್ರಾಮಸಭೆ ನಡೆಸುವ ಕುರಿತು ಸುತ್ತೋಲೆ ಹೊರಡಿಸಲಾಗಿತ್ತು. ಆದರೆ ರಾಜ್ಯದ ಕೆಲವೇ ಗ್ರಾಮ ಪಂಚಾಯಿತಿಗಳಲ್ಲಿ ಮಾತ್ರ ಈ ಕಾರ್ಯಕ್ರಮ ನಡೆಯುತ್ತಿರುವುದು ಗಮನಕ್ಕೆ ಬಂದಿದೆ ಎಂದು ತಿಳಿಸಿದ್ದಾರೆ.
ಈ ವರ್ಷದಿಂದ ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಮಕ್ಕಳ ಗ್ರಾಮಸಭೆಯನ್ನು ಕಡ್ಡಾಯವಾಗಿ ಆಯೋಜಿಸಬೇಕು. ಈ ಮೂಲಕ ಮಕ್ಕಳಿಗೆ ಗ್ರಾಮ ಪಂಚಾಯಿತಿಯ ಕಾರ್ಯವೈಖರಿ, ಆಡಳಿತ ವ್ಯವಸ್ಥೆ ಹಾಗೂ ಸ್ಥಳೀಯ ಸ್ವರಾಜ್ಯ ಸಂಸ್ಥೆಗಳ ಬಗ್ಗೆ ಪರಿಚಯ ಮಾಡಿಸಬೇಕು. ಜೊತೆಗೆ ಮಕ್ಕಳ ಹಕ್ಕುಗಳು, ಪೌಷ್ಟಿಕಾಂಶ, ಶಿಕ್ಷಣ ಮತ್ತು ಆರೋಗ್ಯದ ಕುರಿತು ಅರಿವು ಮೂಡಿಸಬೇಕು ಎಂದು ಸೂಚಿಸಿದ್ದಾರೆ.
ನ.13ರಿಂದ 30ರವರೆಗೆ ವಿಶೇಷ ಮಕ್ಕಳ ಗ್ರಾಮಸಭೆ
ಬೆಂಗಳೂರು ಜಕ್ಕೂರಿನ ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆಯ ಆವರಣದಲ್ಲಿರುವ ಪಾರಂಪರಿಕ ಮಾದರಿ ಗ್ರಾಮದಲ್ಲಿ ನವೆಂಬರ್ 13ರಿಂದ 30ರವರೆಗೆ ಮಕ್ಕಳ ಗ್ರಾಮಸಭೆ ಆಯೋಜಿಸಲು ಸಚಿವರು ಸಲಹೆ ನೀಡಿದ್ದಾರೆ. ನಗರದ ವಿವಿಧ ಶಾಲೆಗಳ ಮಕ್ಕಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸುವಂತೆ ಸೂಚಿಸಿದ್ದಾರೆ.
ಪರಿಸರ ಸಂರಕ್ಷಣೆಯ ಅರಿವು ಮೂಡಿಸಲು ಆದ್ಯತೆ
ಮಕ್ಕಳ ಗ್ರಾಮಸಭೆಗಳ ಮೂಲಕ ಮುಂದಿನ ಪ್ರಜೆಗಳಾದ ಮಕ್ಕಳಲ್ಲಿ ಜಾಗತಿಕ ತಾಪಮಾನ ಏರಿಕೆಯ ಪರಿಣಾಮಗಳ ಕುರಿತು ಅರಿವು ಮೂಡಿಸುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ನೈರ್ಮಲ್ಯ, ಜಲ ಸಂರಕ್ಷಣೆ, ಕೆರೆಗಳ ಸಂರಕ್ಷಣೆ ಹಾಗೂ ಪರಿಸರ ಸಂರಕ್ಷಣೆಯ ಮಹತ್ವವನ್ನು ಮಕ್ಕಳಿಗೆ ತಿಳಿಸಬೇಕು ಎಂದು ಸಚಿವರು ತಿಳಿಸಿದ್ದಾರೆ.




