ಬೆಂಗಳೂರು: ರಾಜ್ಯದಲ್ಲಿ ಬರದಿಂದ ಬೆಳೆ ನಷ್ಟ ಅನುಭವಿಸಿರುವ ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ತಲಾ ₹2,500 ಮಧ್ಯಂತರ ಪರಿಹಾರವನ್ನು ಸೋಮವಾರದಿಂದ ಜಮೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಬರ ಪರಿಹಾರದ ಹಣ ಈಗಾಗಲೇ ಬಿಡುಗಡೆಯಾಗಿದ್ದು, ರೈತರ ಖಾತೆಗಳಿಗೆ ಹಣ ವರ್ಗಾವಣೆ ಮಾಡುವ ಪ್ರಕ್ರಿಯೆ ಸೋಮವಾರದಿಂದ ಆರಂಭವಾಗಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಅರ್ಹ ರೈತರನ್ನು ಗುರುತಿಸಲು ರೂಪಿಸಿರುವ 17 ಅಂಶಗಳ ಮಾರ್ಗಸೂಚಿಯನ್ನು ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ತೊಡಕುಗಳೆಂದು ಬಿಂಬಿಸುತ್ತಿರುವುದಕ್ಕೆ ಪ್ರತಿಕ್ರಿಯಿಸಿರುವ ಪರಮೇಶ್ವರ್, ಅವರು ತಮ್ಮ ಸ್ಥಾನದ ಜವಾಬ್ದಾರಿಯನ್ನು ಅರಿತು ಮಾತನಾಡಬೇಕು ಎಂದು ತಿರುಗೇಟು ನೀಡಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ನೈಜ ಫಲಾನುಭವಿಗಳಿಗೆ ಪರಿಹಾರ ತಲುಪಿಸುವುದು, ಒಂದೇ ಫಲಾನುಭವಿಗೆ ಎರಡೆರಡು ಬಾರಿ ಹಣ ಪಾವತಿಯಾಗುವುದನ್ನು ತಡೆಯುವುದು ಹಾಗೂ ಸಾರ್ವಜನಿಕ ಹಣದ ಸದ್ಬಳಕೆಯನ್ನು ಖಚಿತಪಡಿಸಿಕೊಳ್ಳುವುದು ಈ ನಿಯಮಗಳ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.



