ಮಂಗಳೂರು: 2047ರ ವೇಳೆಗೆ ಭಾರತವನ್ನು ವಿಕಸಿತ ರಾಷ್ಟ್ರವನ್ನಾಗಿ ರೂಪಿಸುವಲ್ಲಿ ಯುವಜನರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಯುವಜನರು ಕೇವಲ ಪ್ರೇಕ್ಷಕರಾಗಿರದೆ, ನೀತಿ ನಿರೂಪಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ನಾಯಕರಾಗಬೇಕು ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಕರೆ ನೀಡಿದರು.
ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ MY Bharat – ದಕ್ಷಿಣ ಕನ್ನಡ, ಮಂಗಳೂರು ವಿಶ್ವವಿದ್ಯಾಲಯ, ಬೇಸೆಂಟ್ ಮಹಿಳಾ ಕಾಲೇಜು ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸಂಯುಕ್ತ ಆಶ್ರಯದಲ್ಲಿ ಬೇಸೆಂಟ್ ಮಹಿಳಾ ಕಾಲೇಜಿನಲ್ಲಿ ನಡೆದ ವಿಕಸಿತ ಭಾರತ್ ಯಂಗ್ ಲೀಡರ್ಸ್ ಡೈಲಾಗ್ 2027 ಅಂಗವಾಗಿ ಆಯೋಜಿಸಿದ್ದ ‘ಯೂತ್ ಪಾರ್ಲಿಮೆಂಟ್ 2027 – Lead the Path to Viksit Bharat’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಜಿಲ್ಲಾ ಮಟ್ಟದಿಂದ ರಾಷ್ಟ್ರಮಟ್ಟದವರೆಗೆ ಸ್ಪರ್ಧೆಗಳಲ್ಲಿ ಭಾಗವಹಿಸಿ ಜಿಲ್ಲೆಗೆ ಕೀರ್ತಿ ತರುವಂತೆ ಅವರು ಪ್ರೇರೇಪಿಸಿದರು.
ವಿಮೆನ್ಸ್ ನ್ಯಾಷನಲ್ ಎಜುಕೇಷನ್ ಸೊಸೈಟಿಯ ಉಪಾಧ್ಯಕ್ಷ ಜೀವನ್ದಾಸ್ ನಾರಾಯಣ್ ಅಧ್ಯಕ್ಷತೆ ವಹಿಸಿ, ಇಂತಹ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದರ ಮಹತ್ವವನ್ನು ತಿಳಿಸಿದರು.
ಕಾರ್ಯಕ್ರಮದ ಆರಂಭದಲ್ಲಿ ವಂದೇ ಮಾತರಂ ಹಾಗೂ ನಾಡಗೀತೆ ಹಾಡಲಾಯಿತು. ಬಳಿಕ ಗಣ್ಯರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರದೀಪ್ ಡಿ’ಸೋಜಾ, MY Bharat ದಕ್ಷಿಣ ಕನ್ನಡದ ಉಪ ನಿರ್ದೇಶಕ ಉಲ್ಲಾಸ್ ಕೆ.ಟಿ.ಕೆ., ಮಂಗಳೂರು ವಿಶ್ವವಿದ್ಯಾಲಯದ ಎನ್ಎಸ್ಎಸ್ ಕಾರ್ಯಕ್ರಮ ಸಂಯೋಜಕ ಡಾ. ಶೇಷಪ್ಪ ಕೆ. ಅಮಿನ್, MY Bharatನ ಜಗದೀಶ್ ಕೆ. ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲ ಡಾ. ಪರಶುರಾಮ್ ಜಿ. ಮಾಲಗಿ ಶುಭ ಹಾರೈಸಿದರು.
ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದ ಯೂತ್ ಪಾರ್ಲಿಮೆಂಟ್ ಅಧಿವೇಶನದಲ್ಲಿ ವಿದ್ಯಾರ್ಥಿನಿಯರು ಸಂಸತ್ತಿನ ಮಾದರಿಯಲ್ಲಿ ವಿವಿಧ ವಿಷಯಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು. ವಿಕಸಿತ ಭಾರತ, ಯುವ ನಾಯಕತ್ವ, ಪ್ರಜಾಪ್ರಭುತ್ವದಲ್ಲಿ ಯುವಜನರ ಪಾಲ್ಗೊಳ್ಳುವಿಕೆ ಹಾಗೂ ‘ಒಂದು ರಾಷ್ಟ್ರ, ಒಂದು ಚುನಾವಣೆ’ ವಿಷಯಗಳ ಕುರಿತು ಭಾಷಣ ಸ್ಪರ್ಧೆ ನಡೆಯಿತು.
ಕಾರ್ಯಕ್ರಮದಲ್ಲಿ ಅಧ್ಯಾಪಕರು, MY Bharat ತಂಡದ ಸದಸ್ಯರು, ಎನ್ಎಸ್ಎಸ್ ಸ್ವಯಂಸೇವಕರು ಹಾಗೂ ನೂರಾರು ವಿದ್ಯಾರ್ಥಿನಿಯರು ಭಾಗವಹಿಸಿದ್ದರು.



