ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಗುರುವಾಯನಕೆರೆ–ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕುಪ್ಪೆಟ್ಟಿ–ಉಪ್ಪಿನಂಗಡಿ ರಸ್ತೆಯ ದುರವಸ್ಥೆಯನ್ನು ಖಂಡಿಸಿ ಕುಪ್ಪೆಟ್ಟಿ ನಾಗರಿಕ ಹೋರಾಟ ಸಮಿತಿಯ ನೇತೃತ್ವದಲ್ಲಿ ಕಲ್ಲೇರಿ ಜಂಕ್ಷನ್ ಬಳಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಿತು.
ಸಮಿತಿಯ ಅಧ್ಯಕ್ಷ ಅಬ್ಬಾಸ್ ಬಟ್ಲಡ್ಕ ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಅಣ್ಣಿಗೌಡ ಪುಷ್ಪಗಿರಿ ಮಾತನಾಡಿ, ರಸ್ತೆ ದುರಸ್ತಿಗಾಗಿ ಸಾರ್ವಜನಿಕರು ತಮ್ಮ ನ್ಯಾಯಯುತ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಸುಮಾರು 60 ವರ್ಷಗಳ ಹಿಂದೆ ರಸ್ತೆ ನಿರ್ವಹಣೆಗಾಗಿ ಗ್ಯಾಂಗ್ ವರ್ಕ್ಸ್ ವ್ಯವಸ್ಥೆಯಡಿ ಕಾರ್ಮಿಕರನ್ನು ನೇಮಿಸಲಾಗುತ್ತಿತ್ತು. ಅದೇ ವ್ಯವಸ್ಥೆಯನ್ನು ಪುನರಾರಂಭಿಸುವ ಮೂಲಕ ರಸ್ತೆ ನಿರ್ವಹಣೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಎಸ್ಎಸ್ಎಫ್ ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಆಲಿ ತುರ್ಕಳಿಕೆ ಮಾತನಾಡಿ, ಈ ರಸ್ತೆಯ ದುಸ್ಥಿತಿಯಿಂದಾಗಿ ನಿತ್ಯ ಸಂಚರಿಸುವ ಸಾರ್ವಜನಿಕರು, ವಿದ್ಯಾರ್ಥಿಗಳು, ವಾಹನ ಚಾಲಕರು, ಕಾರ್ಮಿಕರು ಹಾಗೂ ರೋಗಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ರಸ್ತೆ ಅಭಿವೃದ್ಧಿಯ ವಿಚಾರದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿರುವುದು ಖಂಡನೀಯ. ನವೆಂಬರ್ 16ರೊಳಗೆ ರಸ್ತೆ ಕಾಮಗಾರಿ ಆರಂಭಿಸಬೇಕು. ಇಲ್ಲದಿದ್ದರೆ ರಸ್ತೆ ತಡೆದು ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನಾಕಾರರು ‘ಭರವಸೆ ಬೇಡ, ರಸ್ತೆ ಬೇಕು; ನ್ಯಾಯ ಬೇಕು’ ಎಂಬ ಘೋಷಣೆಗಳೊಂದಿಗೆ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯ ಅಂಗವಾಗಿ ರಸ್ತೆ ತಡೆ ನಡೆಸಿದ ಪರಿಣಾಮ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.
ಸ್ಥಳಕ್ಕೆ ಆಗಮಿಸಿದ ಉಪ್ಪಿನಂಗಡಿ ಪೊಲೀಸ್ ಠಾಣೆಯ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿ ಸುಗಮ ಸಂಚಾರಕ್ಕೆ ಕ್ರಮ ಕೈಗೊಂಡರು. ರಸ್ತೆ ಅಭಿವೃದ್ಧಿ ಕಾಮಗಾರಿ ಶೀಘ್ರ ಆರಂಭಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದ್ದು, ಬೇಡಿಕೆ ಈಡೇರದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ ನೀಡಿದ್ದಾರೆ.



