ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನೊಖ್ಯ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ತೀವ್ರಗೊಂಡಿದ್ದು, ಕೃಷಿ ಬೆಳೆಗಳಿಗೆ ಭಾರೀ ಹಾನಿಯಾಗಿದೆ. ಕಾಡಾನೆಗಳ ನಿರಂತರ ದಾಳಿಯಿಂದ ಸ್ಥಳೀಯ ಬೆಳೆಗಾರರು ಅಪಾರ ನಷ್ಟ ಅನುಭವಿಸುತ್ತಿದ್ದು, ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ.
ವಿರಾಜಪೇಟೆ ತಾಲೂಕಿನ ನೊಖ್ಯ–ತಿತಿಮತಿ ಗ್ರಾಮದಲ್ಲಿ ನಿನ್ನೆ ರಾತ್ರಿ ಮರಿಯೊಂದಿಗಿನ ಕಾಡಾನೆಗಳ ಹಿಂಡು ಗದ್ದೆಗೆ ನುಗ್ಗಿ ಭತ್ತದ ಬೆಳೆಯನ್ನು ಸಂಪೂರ್ಣವಾಗಿ ತುಳಿದು ತಿಂದು ನಾಶಪಡಿಸಿವೆ. ಚೆಪ್ಪುಡೀರ ಕಾರ್ಯಪ್ಪ ಅವರಿಗೆ ಸೇರಿದ ಗದ್ದೆಯಲ್ಲಿ ಈ ಘಟನೆ ನಡೆದಿದೆ.
ಸೋಲಾರ್ ತಂತಿ ಬೇಲಿ ಅಳವಡಿಸಿದ್ದರೂ ಅದನ್ನು ಲೆಕ್ಕಿಸದೆ ಕಾಡಾನೆಗಳು ಗದ್ದೆಗೆ ನುಗ್ಗಿ ಬೆಳೆ ನಾಶಪಡಿಸಿವೆ. ಇನ್ನೇನು ಕೆಲವೇ ದಿನಗಳಲ್ಲಿ ಹುತ್ತರಿ ಹಬ್ಬ ನಡೆಯಲಿದ್ದು, ಕೊಯ್ಲಿಗೆ ಸಿದ್ಧವಾಗಿದ್ದ ಭತ್ತದ ಬೆಳೆ ನಾಶವಾಗಿರುವುದು ಬೆಳೆಗಾರರ ಆತಂಕಕ್ಕೆ ಕಾರಣವಾಗಿದೆ.
ಈ ಕುರಿತು ಹಲವು ಬಾರಿ ಅರಣ್ಯ ಇಲಾಖೆಗೆ ದೂರು ನೀಡಿದ್ದರೂ ಯಾವುದೇ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಹಾಗೂ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ, ಆನೆಗಳು ಕೃಷಿ ಭೂಮಿಗೆ ಪ್ರವೇಶಿಸದಂತೆ ವೈಜ್ಞಾನಿಕ ಮತ್ತು ಶಾಶ್ವತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಬೆಳೆಗಾರರು ಆಗ್ರಹಿಸಿದ್ದಾರೆ.



