ಪುತ್ತೂರು: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಒದಗಿಸುವ ಉದ್ದೇಶದಿಂದ ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜು ಹಮ್ಮಿಕೊಂಡಿರುವ ‘ಮೇಧಾ’ ಪ್ರವೇಶ ಪರೀಕ್ಷೆಯು ಡಿಸೆಂಬರ್ 6ರಂದು ಬೆಳಗ್ಗೆ 10 ಗಂಟೆಗೆ ದಕ್ಷಿಣ ಕನ್ನಡ ಸೇರಿದಂತೆ ಐದು ಜಿಲ್ಲೆಗಳ 9 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.
ಈ ಕುರಿತು ಬುಧವಾರ ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ರವೀಂದ್ರ ಪಿ., ಗ್ರಾಮೀಣ ಹಾಗೂ ಹಿಂದುಳಿದ ಪ್ರದೇಶಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಈ ಯೋಜನೆ ರೂಪಿಸಲಾಗಿದೆ ಎಂದರು.
ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡುವ 25 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಪೈಕಿ 10 ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತ ಶಿಕ್ಷಣ ಹಾಗೂ ಉಳಿದ 15 ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕದಲ್ಲಿ ವಿಶೇಷ ರಿಯಾಯಿತಿ ನೀಡಲಾಗುತ್ತದೆ.
ಕಳೆದ ಎರಡು ಶೈಕ್ಷಣಿಕ ವರ್ಷಗಳಿಂದ ಜಾರಿಯಲ್ಲಿರುವ ಈ ಯೋಜನೆಯಡಿ ಕನ್ನಡ ಮತ್ತು ಆಂಗ್ಲ ಮಾಧ್ಯಮಗಳಲ್ಲಿ ಪರೀಕ್ಷೆ ನಡೆಯಲಿದೆ. 9 ಮತ್ತು 10ನೇ ತರಗತಿಯ ಗಣಿತ, ವಿಜ್ಞಾನ ಹಾಗೂ ಸಾಮಾನ್ಯ ಜ್ಞಾನ ವಿಷಯಗಳನ್ನು ಆಧರಿಸಿ 120 ನಿಮಿಷಗಳ ಪರೀಕ್ಷೆ ನಡೆಸಲಾಗುತ್ತದೆ. ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಗಳಲ್ಲಿ ಪಿಯುಸಿ ಶಿಕ್ಷಣ ಪಡೆಯಲು ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬಹುದು.
ನೋಂದಣಿಗೆ ನ. 30 ಕೊನೆಯ ದಿನ
ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ನವೆಂಬರ್ 30 ಕೊನೆಯ ದಿನವಾಗಿದೆ. ಪುತ್ತೂರು, ಕಡಬ, ವಿಟ್ಲ, ಬಿ.ಸಿ.ರೋಡ್, ಸುಳ್ಯ, ಕಾಸರಗೋಡು, ಮಡಿಕೇರಿ, ಸಕಲೇಶಪುರ ಹಾಗೂ ತುಮಕೂರಿನ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ಆಸಕ್ತ ವಿದ್ಯಾರ್ಥಿಗಳು ವಿವೇಕಾನಂದ ಪಿಯು ಕಾಲೇಜಿನ ಅಧಿಕೃತ ವೆಬ್ಸೈಟ್ www.vivekanandapuc.com ಮೂಲಕ ಮೇಧಾ ಪರೀಕ್ಷೆಗೆ ನೋಂದಾಯಿಸಿಕೊಳ್ಳಬಹುದು.
ಪತ್ರಿಕಾಗೋಷ್ಠಿಯಲ್ಲಿ ಕಾಲೇಜಿನ ಕೋಶಾಧಿಕಾರಿ ಸಚಿನ್ ಶೆಣೈ, ನಿರ್ದೇಶಕ ಡಾ. ಕೆ.ಎನ್. ಸುಬ್ರಹ್ಮಣ್ಯ, ಪ್ರಾಂಶುಪಾಲ ದೇವಿಚರಣ್ ರೈ ಎಂ., ಮೇಧಾ ಸಂಯೋಜಕ ಶ್ಯಾಮ್ ಪ್ರಸಾದ್ ಹಾಗೂ ಶೈಕ್ಷಣಿಕ ಸಂಯೋಜಕ ಶ್ರೀವತ್ಸ ಉಪಸ್ಥಿತರಿದ್ದರು.




