ಬೆಂಗಳೂರು: ಬೆಂಗಳೂರು–ಮಂಗಳೂರು ನಡುವಿನ ರೈಲು ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ರೈಲು ಮಾರ್ಗದ ದ್ವಿಪಥ ನಿರ್ಮಾಣಕ್ಕೆ ಮಹತ್ವದ ಹೆಜ್ಜೆ ಇಡಲಾಗಿದೆ. ಈ ಯೋಜನೆಗೆ ಸಂಬಂಧಿಸಿದ ಅಂತಿಮ ಸ್ಥಳ ಸಮೀಕ್ಷೆ (FLS) ಪೂರ್ಣಗೊಂಡಿದ್ದು, ಇದೀಗ ವಿವರವಾದ ಯೋಜನಾ ವರದಿ (DPR) ಸಿದ್ಧಪಡಿಸುವ ಕಾರ್ಯ ಪ್ರಗತಿಯಲ್ಲಿದೆ.
ಪಶ್ಚಿಮ ಘಟ್ಟದ ಕಠಿಣ ಭೌಗೋಳಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಕಡಿಮೆ ಇಳಿಜಾರಿನೊಂದಿಗೆ ಎರಡನೇ ರೈಲು ಮಾರ್ಗ ನಿರ್ಮಿಸುವ ನಿಟ್ಟಿನಲ್ಲಿ ಹೊಸ ವಿನ್ಯಾಸ ರೂಪಿಸಲಾಗುತ್ತಿದೆ. ಈ ಯೋಜನೆ ಅನುಷ್ಠಾನಗೊಂಡಲ್ಲಿ ಘಟ್ಟ ಪ್ರದೇಶದಲ್ಲಿ ರೈಲು ಸಂಚಾರದ ಸಾಮರ್ಥ್ಯ ಹೆಚ್ಚುವುದರ ಜೊತೆಗೆ ಬೆಂಗಳೂರು–ಮಂಗಳೂರು ನಡುವಿನ ಸಂಪರ್ಕ ವ್ಯವಸ್ಥೆ ಮತ್ತಷ್ಟು ಸುಧಾರಿಸಲಿದೆ ಎಂಬ ನಿರೀಕ್ಷೆಯಿದೆ.
ಇದೇ ಸಂದರ್ಭದಲ್ಲಿ ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯಲ್ಲಿ ವಿಲೀನಗೊಳಿಸುವ ಪ್ರಸ್ತಾವನೆಯೂ ಮುನ್ನೆಲೆಗೆ ಬಂದಿದೆ. ಈ ಪ್ರಕ್ರಿಯೆಗೆ ಕರ್ನಾಟಕ, ಕೇರಳ, ಗೋವಾ ಮತ್ತು ಮಹಾರಾಷ್ಟ್ರ ಸೇರಿದಂತೆ ನಾಲ್ಕು ರಾಜ್ಯಗಳ ಒಪ್ಪಿಗೆ ಅಗತ್ಯವಾಗಿದೆ.
ಈ ಹಿನ್ನೆಲೆಯಲ್ಲಿ ನಾಲ್ಕೂ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದ್ದು, ರಾಜ್ಯಗಳ ಒಪ್ಪಿಗೆ ದೊರೆತ ನಂತರ ವಿಲೀನ ಪ್ರಕ್ರಿಯೆಯ ಮುಂದಿನ ಹಂತಗಳನ್ನು ಕೈಗೊಳ್ಳಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಬೆಂಗಳೂರು–ಮಂಗಳೂರು ರೈಲು ಮಾರ್ಗದ ದ್ವಿಪಥ ಯೋಜನೆ ಮತ್ತು ಕೊಂಕಣ ರೈಲ್ವೆ ವಿಲೀನ ಪ್ರಕ್ರಿಯೆ ಸಾಕಾರಗೊಂಡಲ್ಲಿ ಕರಾವಳಿ ಕರ್ನಾಟಕದ ರೈಲು ಸಂಪರ್ಕ, ಪ್ರಯಾಣಿಕರ ಸಂಚಾರ ಹಾಗೂ ಸರಕು ಸಾಗಣೆ ವ್ಯವಸ್ಥೆಗೆ ಹೆಚ್ಚಿನ ಬಲ ದೊರೆಯುವ ನಿರೀಕ್ಷೆಯಿದೆ.



