ಮಂಗಳೂರು: 73ನೇ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯಮಟ್ಟದ ಸಮಾರೋಪ ಸಮಾರಂಭ ನವೆಂಬರ್ 20ರಂದು ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿದೆ.
ನವೆಂಬರ್ 14ರಿಂದ 20ರವರೆಗೆ ರಾಜ್ಯಾದ್ಯಂತ ನಡೆಯಲಿರುವ ಸಹಕಾರ ಸಪ್ತಾಹದ ಈ ವರ್ಷದ ಧ್ಯೇಯವಾಕ್ಯ ‘ಸಹಕಾರ ಸಂಘಗಳ ಬೆಳವಣಿಗೆಯಲ್ಲಿ ಉತ್ತಮ ಪರಿಸರ, ತಂತ್ರಜ್ಞಾನ, ಕೌಶಲಾಧಾರಿತ ಮತ್ತು ವೃತ್ತಿಪರ ಸೇವೆ’ ಎಂಬುದಾಗಿದೆ. ಪರಿಸರ ಸಂರಕ್ಷಣೆ, ಲಿಂಗ ಸಮಾನತೆ ಹಾಗೂ ವಿಶ್ವಶಾಂತಿಗಾಗಿ ಸಹಕಾರ ಸಂಸ್ಥೆಗಳ ಪಾತ್ರದ ಕುರಿತು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.
ನ.20ರಂದು ಬೆಳಿಗ್ಗೆ 10 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ರಾಜ್ಯ ಸಹಕಾರ ಸಚಿವ ಲಕ್ಷ್ಮಣ ಸಂಗಪ್ಪ ಸವದಿ ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಫರೀದ್ ಅವರು ಸಹಕಾರ ಮಾಣಿಕ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಹಾಗೂ ಶಾಸಕ ಜಿ.ಟಿ. ದೇವೇಗೌಡ ಅವರು ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ವಿತರಿಸಲಿದ್ದಾರೆ.
ಕೋಟ ಶ್ರೀನಿವಾಸ ಪೂಜಾರಿ ಅವರು ಉತ್ತಮ ಸ್ವಸಹಾಯ ಸಂಘಗಳಿಗೆ ಪುರಸ್ಕಾರ ನೀಡಲಿದ್ದು, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ವಸ್ತುಪ್ರದರ್ಶನ ಮಳಿಗೆಗಳನ್ನು ಉದ್ಘಾಟಿಸಲಿದ್ದಾರೆ. ಶಾಸಕ ಡಿ. ವೇದವ್ಯಾಸ ಕಾಮತ್ ಸಹಕಾರ ಸಪ್ತಾಹದ ಧ್ವಜಾರೋಹಣ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಎಂ.ಎನ್. ರಾಜೇಂದ್ರ ಕುಮಾರ್ ವಹಿಸಲಿದ್ದಾರೆ.
ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ’ಸೋಜಾ, ಮಂಜುನಾಥ ಭಂಡಾರಿ, ಶಾಸಕ ಡಾ. ಭರತ್ ಶೆಟ್ಟಿ ವೈ, ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ನಾಲ್ವರಿಗೆ ಸಹಕಾರಿ ರತ್ನ ಪ್ರಶಸ್ತಿ
ಸಹಕಾರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಜಾ.ಕೆ. ಮಾಧವ ಗೌಡ, ಕೆ. ಪದ್ಮನಾಭ ಕೊಟ್ಟಾರಿ, ವಸಂತ್ ಬೆರ್ನಾಡ್ ಹಾಗೂ ಬೆಳ್ವೆ ಜಯರಾಮ ಶೆಟ್ಟಿ ಅವರಿಗೆ ‘ಸಹಕಾರಿ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ಸಂಘಗಳ ಸಾಧನೆಯನ್ನು ಗುರುತಿಸುವ ಉದ್ದೇಶದಿಂದ 2024ರಿಂದ ನೀಡಲಾಗುತ್ತಿರುವ ‘ಸಹಕಾರ ಮಾಣಿಕ್ಯ ಪ್ರಶಸ್ತಿ’ಯನ್ನು ಈ ಬಾರಿಯೂ 2025-26ನೇ ಸಾಲಿನಲ್ಲಿ ಸರ್ವಾಂಗೀಣ ಪ್ರಗತಿ ಸಾಧಿಸಿದ ನಾಲ್ಕು ಸಹಕಾರಿ ಸಂಘಗಳಿಗೆ ಪ್ರದಾನ ಮಾಡಲಾಗುವುದು. ಪ್ರಶಸ್ತಿಯೊಂದಿಗೆ ತಲಾ 5 ಗ್ರಾಂ ಚಿನ್ನದ ಪದಕ, 10 ಸಾವಿರ ರೂ. ನಗದು ಹಾಗೂ ಪಾರಿತೋಷಕ ನೀಡಿ ಗೌರವಿಸಲಾಗುವುದು. ಅತ್ಯುತ್ತಮ ಸ್ವಸಹಾಯ ಗುಂಪುಗಳನ್ನೂ ಗುರುತಿಸಿ ಸನ್ಮಾನಿಸಲಾಗುವುದು.
ಸುದ್ದಿಗೋಷ್ಠಿಯಲ್ಲಿ ಬ್ಯಾಂಕಿನ ನಿರ್ದೇಶಕರಾದ ಶಶಿಕುಮಾರ್ ರೈ, ಜಯರಾಜ ರೈ ಹಾಗೂ ವ್ಯವಸ್ಥಾಪಕ ನಿರ್ದೇಶಕ ಗೋಪಾಲಕೃಷ್ಣ ಭಟ್ ಉಪಸ್ಥಿತರಿದ್ದರು.




