ಮಂಗಳೂರು: ಕಸ್ತೂರಿ ರಂಗನ್ ವರದಿಯನ್ನು ರಾಜ್ಯ ಸರ್ಕಾರ ಈಗಾಗಲೇ ಆರು ಬಾರಿ ತಿರಸ್ಕರಿಸಿ ತೀರ್ಮಾನ ಕೈಗೊಂಡಿದೆ. ಇದೀಗ ಏಳನೇ ಬಾರಿಗೆ ತಳಮಟ್ಟದಲ್ಲಿ ಸಮೀಕ್ಷೆ ನಡೆಸಿ, ಒಂದು ವರ್ಷದೊಳಗೆ ಪಶ್ಚಿಮ ಘಟ್ಟ ಪ್ರದೇಶದ ವಾಸ್ತವಿಕ ಚಿತ್ರಣವನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲು ಅನುಮತಿ ಕೋರಲಾಗಿದೆ ಎಂದು ಅರಣ್ಯ, ಪರಿಸರ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಮಂಗಳೂರಿನ ಪಿಲಿಕುಳ ನಿಸರ್ಗಧಾಮಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಒಂದು ವರ್ಷದೊಳಗೆ ಭೌತಿಕ ಸಮೀಕ್ಷೆ ನಡೆಸಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು. ಈ ನಿಟ್ಟಿನಲ್ಲಿ ಜಿಲ್ಲಾ ಮಟ್ಟದಲ್ಲಿ ಸಮಿತಿಗಳನ್ನು ರಚಿಸಿ ಕಾರ್ಯಪ್ರವೃತ್ತರಾಗುವಂತೆ ಸೂಚನೆ ನೀಡಲಾಗಿದೆ ಎಂದರು.
ಬಳಿಕ ಸಚಿವ ರಾಮಲಿಂಗಾರೆಡ್ಡಿ ಅವರು ಬೆಂಗರೆಯಲ್ಲಿರುವ ಅರಣ್ಯ ಇಲಾಖೆಯ ಏರೋಡೈನಾಮಿಕ್ ನೆಡುತೋಪು ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.



