ಬೆಂಗಳೂರು: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ವಿಶೇಷ ಸಂಕ್ಷಿಪ್ತ ಮತದಾರರ ಪಟ್ಟಿ ಪರಿಷ್ಕರಣೆ (SSR) ಆರಂಭಿಸಲು ಭಾರತೀಯ ಚುನಾವಣಾ ಆಯೋಗ ಸೂಚನೆ ನೀಡಿದೆ.
ಆಯೋಗದ ವೇಳಾಪಟ್ಟಿಯಂತೆ ಡಿಸೆಂಬರ್ 1ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಲಿದ್ದು, 2027ರ ಜನವರಿ 20ರಂದು ಅಂತಿಮ ಮತದಾರರ ಪಟ್ಟಿ ಬಿಡುಗಡೆಯಾಗಲಿದೆ.
ನವೆಂಬರ್ 23ರಂದು ಮತಗಟ್ಟೆಗಳ ಮರುಹೊಂದಾಣಿಕೆ ಪ್ರಕ್ರಿಯೆ ನಡೆಯಲಿದೆ. ಡಿಸೆಂಬರ್ 1ರಿಂದ 31ರವರೆಗೆ ಮತದಾರರ ಪಟ್ಟಿಗೆ ಸಂಬಂಧಿಸಿದ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಜನವರಿ 14ರೊಳಗೆ ಇತ್ಯರ್ಥಪಡಿಸಲು ಸೂಚಿಸಲಾಗಿದೆ.
SSR ಪ್ರಕ್ರಿಯೆಯಲ್ಲಿ ಮತದಾರರ ಮನೆಮನೆಗೆ ಭೇಟಿ ನೀಡಿ ಗಣತಿ ನಡೆಸುವ ಕ್ರಮ ಇರುವುದಿಲ್ಲ. ಹೊಸದಾಗಿ ಹೆಸರು ಸೇರ್ಪಡೆಗೆ ನಮೂನೆ-6, ಹೆಸರು ಅಳಿಸಲು ನಮೂನೆ-7 ಹಾಗೂ ಹೆಸರು ಅಥವಾ ಇತರ ವಿವರಗಳ ತಿದ್ದುಪಡಿಗೆ ನಮೂನೆ-8 ಸಲ್ಲಿಸಬೇಕು. ಬೂತ್ ಮಟ್ಟದ ಅಧಿಕಾರಿಗಳು (BLO), ಮತದಾರರ ನೋಂದಣಾಧಿಕಾರಿಗಳ ಕಚೇರಿ ಅಥವಾ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಕರ್ನಾಟಕದಲ್ಲಿ SIR ಪ್ರಕ್ರಿಯೆಗೂ ಮುನ್ನ 5.54 ಕೋಟಿ ಮತದಾರರಿದ್ದು, ಅಂತಿಮ ಪಟ್ಟಿಯಲ್ಲಿ 4.55 ಕೋಟಿ ಮತದಾರರು ಸ್ಥಾನ ಪಡೆದಿದ್ದಾರೆ. ಇದೀಗ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಹಾಗೂ ಅನರ್ಹ ಹೆಸರುಗಳು ಸೇರ್ಪಡೆಯಾಗದಂತೆ ಎಚ್ಚರಿಕೆ ವಹಿಸಲು ಆಯೋಗ ಸೂಚಿಸಿದೆ.
2027ರ ಜನವರಿ 1ರ ಅರ್ಹತಾ ದಿನಾಂಕದ ಜೊತೆಗೆ ಏಪ್ರಿಲ್ 1, ಜುಲೈ 1 ಮತ್ತು ಅಕ್ಟೋಬರ್ 1ರಂದು 18 ವರ್ಷ ತುಂಬುವವರ ಹೆಸರನ್ನೂ ನಿಗದಿತ ಅರ್ಹತಾ ದಿನಾಂಕಗಳ ಆಧಾರದಲ್ಲಿ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ನಿರ್ದೇಶನ ನೀಡಲಾಗಿದೆ.



