ಮಂಗಳೂರು: ಬೆಳ್ತಂಗಡಿಯ ಪೂಂಜಾಲಕಟ್ಟೆ ಸರ್ಕಾರಿ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ಶಾಸಕ ಹರೀಶ್ ಪೂಂಜಾ ಅವರು ರಾಜಕೀಯ ಪ್ರೇರಿತ ಭಾಷಣ ಮಾಡಿರುವುದು ಹಾಗೂ ಶಾಲಾ ಮಕ್ಕಳಿಂದ ರಾಜಕೀಯ ಘೋಷಣೆಗಳನ್ನು ಕೂಗಿಸಿರುವುದು ಖಂಡನೀಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಾಲೆಗಳು ಜ್ಞಾನ ದೇಗುಲಗಳಾಗಿದ್ದು, ಮಕ್ಕಳನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ಪ್ರಜಾಪ್ರಭುತ್ವ ಮತ್ತು ಶಿಕ್ಷಣ ವ್ಯವಸ್ಥೆಗೆ ಮಾಡಿದ ಅಪಮಾನವಾಗಿದೆ. ಸರ್ಕಾರಿ ಅನುದಾನದಲ್ಲಿ ನಿರ್ಮಾಣವಾದ ಸಭಾಭವನದ ಉದ್ಘಾಟನೆ ವಿಚಾರದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ, ಖಾಸಗಿ ಸಂಸ್ಥೆಗೆ ಅಭಿನಂದನೆ ಸಲ್ಲಿಸುವ ನೆಪದಲ್ಲಿ ಶಾಲಾ ವೇದಿಕೆಯನ್ನು ರಾಜಕೀಯ ಭಾಷಣಕ್ಕೆ ಬಳಸಿಕೊಳ್ಳಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಶಾಲಾ ಮಕ್ಕಳ ಮನಸ್ಸಿನಲ್ಲಿ ರಾಜಕೀಯ ವಿಷಬೀಜ ಬಿತ್ತುವ ಇಂತಹ ಬೆಳವಣಿಗೆಗಳ ವಿರುದ್ಧ ಶಿಕ್ಷಣ ಇಲಾಖೆ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪದ್ಮರಾಜ್ ಒತ್ತಾಯಿಸಿದ್ದಾರೆ.



