ಮಂಗಳೂರು ; ಕುಂಪಲ ಸಮೀಪದ ಚೇತನ ನಗರದಲ್ಲಿ ಗುಜರಿ ಅಂಗಡಿಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.
ಚೇತನ ನಗರದ ಬಾಡಿಗೆ ಕೋಣೆಯೊಂದರಲ್ಲಿ ಅಬ್ದುಲ್ ತುಫೈಲ್ ಎಂಬವರು ಗುಜರಿ ಅಂಗಡಿ ನಡೆಸುತ್ತಿದ್ದರು ಎನ್ನಲಾಗಿದೆ. ಈ ಅಂಗಡಿಯ ಮಾಲಕರಿಗೆ ಪುರಸಭೆಯಿಂದ ಈಗಾಗಲೇ ಮೂರು ಬಾರಿ ನೋಟಿಸ್ ನೀಡಲಾಗಿತ್ತು ಎಂದು ತಿಳಿದುಬಂದಿದೆ.
ನಿನ್ನೆ ರಾತ್ರಿ ಅಂಗಡಿ ಮುಚ್ಚಿದ ಬಳಿಕ ಒಳಗಡೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯ ಕೆನ್ನಾಲಿಗೆ ಅಕ್ಕಪಕ್ಕದ ಮನೆಗಳಿಗೆ ವ್ಯಾಪಿಸುವ ಸಾಧ್ಯತೆ ಕಂಡುಬಂದ ಹಿನ್ನೆಲೆಯಲ್ಲಿ ಸ್ಥಳೀಯರು ತಕ್ಷಣವೇ ಬೆಂಕಿ ನಂದಿಸಲು ಮುಂದಾಗಿದ್ದಾರೆ.
ವಿಷಯ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ.
ಘಟನೆಯಿಂದ ಅಕ್ಕಪಕ್ಕದ ಮನೆಗಳಿಗೆ ಬೆಂಕಿ ವ್ಯಾಪಿಸದಂತೆ ಸ್ಥಳೀಯರು ಸಮಯಪ್ರಜ್ಞೆ ಮೆರೆದಿದ್ದಾರೆ.



