ಮಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಜೀವಂತ ಫಲಾನುಭವಿಗಳನ್ನು ತಪ್ಪಾಗಿ ಮೃತರೆಂದು ದಾಖಲಿಸಿರುವ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸಬೇಕು. ಮರಣ ಹೊಂದಿದ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಜಮೆಯಾಗಿರುವ ಹಣದ ವಸೂಲಾತಿ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ಈ ನಿಟ್ಟಿನಲ್ಲಿ ಶೇಕಡಾ 100ರಷ್ಟು ಗುರಿ ಸಾಧಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ ಸೂಚಿಸಿದ್ದಾರೆ.
ಗುರುವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನಲ್ಲಿ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗೃಹಲಕ್ಷ್ಮಿ ಯೋಜನೆಯಡಿ ಮರಣ ಹೊಂದಿದ ಫಲಾನುಭವಿಗಳ ಖಾತೆಗಳಿಗೆ ಮುಂದಿನ ದಿನಗಳಲ್ಲಿ ಹಣ ಜಮೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಈ ಸಂಬಂಧ ತಾಲೂಕು ಮಟ್ಟದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಲೀಡ್ ಬ್ಯಾಂಕ್ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಸಮನ್ವಯದಿಂದ ಸಭೆ ನಡೆಸಿ, ಸೂಕ್ತ ನಿರ್ಣಯಗಳನ್ನು ಕೈಗೊಳ್ಳಬೇಕು. ವಸೂಲಾತಿ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸಿ, ಕೈಗೊಂಡ ಕ್ರಮಗಳ ಕುರಿತು ವರದಿ ಸಲ್ಲಿಸಬೇಕು ಎಂದು ಅವರು ತಿಳಿಸಿದರು.
ಅದೇ ರೀತಿ, ಯೋಜನೆಯಡಿ ಜೀವಂತ ಫಲಾನುಭವಿಗಳನ್ನು ತಪ್ಪಾಗಿ ಮೃತರೆಂದು ದಾಖಲಿಸಿರುವ ಪ್ರಕರಣಗಳನ್ನು ಗುರುತಿಸಿ, ಫಲಾನುಭವಿಗಳಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕು. ಇಂತಹ ತಪ್ಪುಗಳು ಮರುಕಳಿಸದಂತೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳು ಆದ್ಯತೆ ನೀಡಬೇಕು ಎಂದು ಸೂಚಿಸಿದರು.
ವಿಶೇಷಚೇತನರಿಗೆ ಮೀಸಲಾದ ಆಸನಗಳ ಸೌಲಭ್ಯ ಒದಗಿಸಲು ಸೂಚನೆ
ಶಕ್ತಿ ಯೋಜನೆಯಡಿ ಬಸ್‌ಗಳಲ್ಲಿ ವಿಶೇಷಚೇತನರಿಗೆ ಮೀಸಲಾದ ಆಸನಗಳು ಅವರಿಗೆ ಸಮರ್ಪಕವಾಗಿ ಲಭ್ಯವಾಗುವಂತೆ ನೋಡಿಕೊಳ್ಳಬೇಕು. ಮೀಸಲಾದ ಆಸನಗಳಲ್ಲಿ ಇತರ ಪ್ರಯಾಣಿಕರಿಗೆ ಅವಕಾಶ ನೀಡದಂತೆ ಬಸ್ ಸಿಬ್ಬಂದಿಗೆ ಸೂಕ್ತ ಮಾಹಿತಿ ನೀಡಿ, ಅಗತ್ಯ ಸೂಚನೆಗಳನ್ನು ಜಾರಿಗೊಳಿಸಬೇಕು. ವಿಶೇಷಚೇತನ ಪ್ರಯಾಣಿಕರಿಗೆ ಪ್ರಯಾಣದ ವೇಳೆ ಯಾವುದೇ ತೊಂದರೆಯಾಗದಂತೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಭರತ್ ಮುಂಡೋಡಿ ಹೇಳಿದರು.
ಅನ್ನಭಾಗ್ಯ ಇ-ಕೆವೈಸಿ ಪೂರ್ಣಗೊಳಿಸಲು ಕರೆ
ಅನ್ನಭಾಗ್ಯ ಯೋಜನೆಯು ಮಹತ್ವದ ಜನಕಲ್ಯಾಣ ಯೋಜನೆಯಾಗಿದ್ದು, ಇದರಡಿ ನಡೆಯುತ್ತಿರುವ ಇ-ಕೆವೈಸಿ ಪ್ರಕ್ರಿಯೆಯನ್ನು ನಿಗದಿತ ಗುರಿಯಂತೆ ಪೂರ್ಣಗೊಳಿಸಲು ಸಂಬಂಧಪಟ್ಟ ಎಲ್ಲರೂ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.
ಸಹಾಯಕ ಪವರ್‌ಮ್ಯಾನ್‌ಗಳ ನೇಮಕಕ್ಕೆ ನಿರ್ಣಯ
ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶಗಳು ಹೆಚ್ಚಿನ ಪ್ರಮಾಣದಲ್ಲಿ ಅರಣ್ಯ ಪ್ರದೇಶಗಳಿಂದ ಕೂಡಿರುವುದರಿಂದ, ವಿಪರೀತ ಗಾಳಿ ಮತ್ತು ಮಳೆಯ ಸಂದರ್ಭದಲ್ಲಿ ವಿದ್ಯುತ್ ಸರಬರಾಜು ವ್ಯವಸ್ಥೆಯನ್ನು ಸುಗಮವಾಗಿ ನಿರ್ವಹಿಸುವುದು ಸವಾಲಿನ ಕೆಲಸವಾಗಿದೆ. ವಿದ್ಯುತ್ ವ್ಯತ್ಯಯ ಉಂಟಾದಾಗ ದುರಸ್ತಿ ಕಾರ್ಯಗಳನ್ನು ತ್ವರಿತವಾಗಿ ಕೈಗೊಳ್ಳಲು ಸಿಬ್ಬಂದಿ ಕೊರತೆಯೂ ಸಮಸ್ಯೆಯಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲೆಯ ವಿದ್ಯುತ್ ಸರಬರಾಜು ವ್ಯವಸ್ಥೆಯನ್ನು ಸುಧಾರಿಸುವ ಉದ್ದೇಶದಿಂದ ಅಗತ್ಯ ಸಂಖ್ಯೆಯಲ್ಲಿ ಸಹಾಯಕ ಪವರ್‌ಮ್ಯಾನ್‌ಗಳನ್ನು ನೇಮಕ ಮಾಡುವಂತೆ ಇಂಧನ ಸಚಿವರಿಗೆ ಪತ್ರ ಬರೆಯಲು ಸಭೆಯಲ್ಲಿ ನಿರ್ಣಯಿಸಲಾಯಿತು.



