ಮಂಗಳೂರು, ಅ. 28: ವಿಧಾನ ಪರಿಷತ್ತಿನ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಮಂಗಳೂರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬುಧವಾರ ವಿಜಯೋತ್ಸವ ಆಚರಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ನೇತೃತ್ವದಲ್ಲಿ ನಡೆದ ವಿಜಯೋತ್ಸವದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಗೆಲುವಿನ ಸಂಭ್ರಮವನ್ನು ಹಂಚಿಕೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಸತೀಶ್ ಕುಂಪಲ, ವಿಧಾನ ಪರಿಷತ್ ಚುನಾವಣೆಯ ಫಲಿತಾಂಶವು ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯವನ್ನು ಎತ್ತಿತೋರಿಸಿದೆ ಎಂದು ಹೇಳಿದರು. ಪ್ರಜ್ಞಾವಂತ ಮತದಾರರು ಬಿಜೆಪಿ ಹಾಗೂ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿಗಳ ಪರ ಒಲವು ತೋರಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಜನಪರ ಆಡಳಿತದ ಮೇಲಿನ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು.
ಇವಿಎಂ ಮೂಲಕ ನಡೆಯುವ ಚುನಾವಣೆಗಳ ಬಗ್ಗೆ ಆರೋಪಗಳನ್ನು ಮಾಡುವವರು, ಬ್ಯಾಲೆಟ್ ಪೇಪರ್ ಮೂಲಕ ನಡೆದ ಈ ಚುನಾವಣೆಯ ಫಲಿತಾಂಶದ ಬಗ್ಗೆ ಏನು ಹೇಳುತ್ತಾರೆ ಎಂದು ಪ್ರಶ್ನಿಸಿದ ಅವರು, ಈ ಗೆಲುವು 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಮೈತ್ರಿಕೂಟದ ಅಭ್ಯರ್ಥಿಗಳನ್ನು ಬೆಂಬಲಿಸಿದ ಮತದಾರರಿಗೆ ಅಭಿನಂದನೆ ಸಲ್ಲಿಸಿದರು.
ಮುಖಂಡರ ಉಪಸ್ಥಿತಿ: ವಿಜಯೋತ್ಸವದಲ್ಲಿ ಮಂಗಳೂರು ಸಂಸದ ಹಾಗೂ ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾ. ಬ್ರಿಜೇಶ್ ಚೌಟ, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಮಾಜಿ ಸದಸ್ಯರಾದ ಮೋನಪ್ಪ ಭಂಡಾರಿ ಮತ್ತು ಕ್ಯಾ. ಗಣೇಶ್ ಕಾರ್ಣಿಕ್, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ನಂದನ್ ಮಲ್ಯ, ಕೊಡಗು ಯುವ ಮೋರ್ಚಾ ಪ್ರಭಾರಿ ಭರತೇಶ್, ಮಾಜಿ ಮೇಯರ್ಗಳಾದ ಸುಧೀರ್ ಶೆಟ್ಟಿ ಕಣ್ಣೂರು ಮತ್ತು ಮನೋಜ್ ಕುಮಾರ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಮಂಜುಳಾ ಅನಿಲ್ ರಾವ್ ಸೇರಿದಂತೆ ಪಕ್ಷದ ಪ್ರಮುಖರು, ಮಾಜಿ ನಗರಸಭಾ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.



