ಉಡುಪಿ: ಹುಟ್ಟುಹಬ್ಬವನ್ನು ಸಮಾಜಮುಖಿ ಕಾರ್ಯಗಳ ಮೂಲಕ ಆಚರಿಸಿಕೊಳ್ಳುವ ಮೂಲಕ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಅವರು ಮಾದರಿಯಾಗಿದ್ದಾರೆ ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಹೇಳಿದರು.
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಜಂಟಿ ಆಶ್ರಯದಲ್ಲಿ ಅಜ್ಜರಕಾಡಿನ ಟೌನ್‌ಹಾಲ್‌ನಲ್ಲಿ ಆಯೋಜಿಸಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಮತ್ತು ದಿವ್ಯಾಂಗರಿಗೆ ಪೌಷ್ಟಿಕ ಆಹಾರ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ರಕ್ತದಾನವು ಅಮೂಲ್ಯ ಜೀವಗಳನ್ನು ಉಳಿಸುವ ಮಹತ್ವದ ಸೇವೆಯಾಗಿದೆ. ಅದೇ ರೀತಿ, ದಿವ್ಯಾಂಗರಿಗೆ ಪೌಷ್ಟಿಕ ಆಹಾರ ಕಿಟ್‌ಗಳನ್ನು ವಿತರಿಸುವ ಮೂಲಕ ಅವರ ಆರೋಗ್ಯದ ಕಾಳಜಿ ವಹಿಸುವುದರ ಜತೆಗೆ ಆತ್ಮಸ್ಥೈರ್ಯ ತುಂಬುವ ಪ್ರಯತ್ನ ಶ್ಲಾಘನೀಯ ಎಂದರು.
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿಯಾಗಿದ್ದು, ಚುನಾವಣೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವ ಮೂಲಕ ಜನಪರ ಬದ್ಧತೆಯನ್ನು ಪ್ರದರ್ಶಿಸಿದೆ. ಈ ಯೋಜನೆಗಳ ಪ್ರಯೋಜನಗಳನ್ನು ಇನ್ನಷ್ಟು ಜನರಿಗೆ ತಲುಪಿಸುವ ಕಾರ್ಯವಾಗಬೇಕು ಎಂದು ಹೇಳಿದರು.
ಮನೆಮನೆಗೆ ತೆರಳಿ ಪಕ್ಷ ಸಂಘಟಿಸಿ
ಕಾಂಗ್ರೆಸ್ ಮುಖಂಡ ಮುನಿಯಾಲು ಉದಯಕುಮಾರ್ ಶೆಟ್ಟಿ ಮಾತನಾಡಿ, ಪಕ್ಷ ಸಂಘಟನೆ ಹಾಗೂ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯದಲ್ಲಿ ರಮೇಶ್ ಕಾಂಚನ್ ಅವರಿಂದ ಕಲಿಯಬೇಕಾದ ಅಂಶಗಳಿವೆ. ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕರ್ತರು ಮನೆಮನೆಗೆ ತೆರಳಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಮೇಶ್ ಕಾಂಚನ್ ಅವರನ್ನು ಅವರ ರಾಜಕೀಯ ಹಾಗೂ ಸಾಮಾಜಿಕ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ನಿರ್ಗಮಿತ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹಾಗೂ ನೂತನ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಅವರನ್ನು ಗೌರವಿಸಲಾಯಿತು.
ನೂರಾರು ಮಂದಿ ರಕ್ತದಾನ
ಶಿಬಿರದಲ್ಲಿ ನೂರಾರು ಯುವಕರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು. ಇದೇ ವೇಳೆ ಸುಮಾರು 200 ಮಂದಿ ದಿವ್ಯಾಂಗರಿಗೆ ಪೌಷ್ಟಿಕ ಆಹಾರ ಕಿಟ್‌ಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಅಶೋಕ್ ಕುಮಾರ್ ಕೊಡವೂರು, ಪ್ರಸಾದ್ ರಾಜ್ ಕಾಂಚನ್, ದಿನೇಶ್ ಹೆಗ್ಡೆ ಮೊಳಹಳ್ಳಿ, ದಿನಕರ ಹೇರೂರು, ಡಾ. ಅಶೋಕ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.



