ಬೆಂಗಳೂರು: 2026ನೇ ಸಾಲಿನ ಪ್ರತಿಷ್ಠಿತ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮತ್ತು ಸೇವೆ ಸಲ್ಲಿಸಿದ 71 ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಬಾರಿ 12 ಮಹಿಳಾ ಸಾಧಕಿಯರೂ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರು ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಿದ್ದಾರೆ. ನವೆಂಬರ್ 1ರಂದು ನಡೆಯುವ ರಾಜ್ಯೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಪ್ರಶಸ್ತಿಗೆ ಆಯ್ಕೆಯಾದವರಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಹಿರಿಯ ನ್ಯಾಯವಾದಿ ಬಿ.ವಿ. ಆಚಾರ್ಯ, ನಟ ಅಶೋಕ್, ಜಿಮ್ ರವಿ ಸೇರಿದಂತೆ ಹಲವು ಗಣ್ಯರು ಇದ್ದಾರೆ.
ದಕ್ಷಿಣ ಕನ್ನಡಕ್ಕೆ ಮೂರು ಪ್ರಶಸ್ತಿ
ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಸಾಧಕರಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಒಲಿದಿದೆ. ಮಾಧ್ಯಮ ಮತ್ತು ಛಾಯಾಗ್ರಹಣ ಕ್ಷೇತ್ರದಲ್ಲಿ ವಿಶ್ವನಾಥ ಸುವರ್ಣ, ಸಮಾಜ ಸೇವೆ ಕ್ಷೇತ್ರದಲ್ಲಿ ಎ.ಸಿ. ಭಂಡಾರಿ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಡಾ. ಇಂದಿರಾ ಹೆಗಡೆ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯು 25 ಗ್ರಾಂ ಚಿನ್ನದ ಪದಕ ಹಾಗೂ ₹5 ಲಕ್ಷ ನಗದು ಬಹುಮಾನವನ್ನು ಒಳಗೊಂಡಿದೆ.



