ಮಂಗಳೂರು: ಭಾರತೀಯ ಅಂಚೆ ಇಲಾಖೆಯ ಮೂಲಕ ಗ್ರಾಹಕರಿಗೆ ವಿವಿಧ ನೂತನ ಸೇವಾ ಸೌಲಭ್ಯಗಳು ಲಭ್ಯವಿದ್ದು, ಅವುಗಳ ಸದುಪಯೋಗ ಪಡೆದುಕೊಳ್ಳುವಂತೆ ಪಾಂಡೇಶ್ವರ ಅಂಚೆ ಕೇಂದ್ರದ ಹಿರಿಯ ಅಧಿಕಾರಿ ಲೋಕನಾಥ್ ಕರೆ ನೀಡಿದರು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್, ಪತ್ರಿಕಾ ಭವನ ಟ್ರಸ್ಟ್ ಹಾಗೂ ಭಾರತೀಯ ಅಂಚೆ ಇಲಾಖೆಯ ಸಹಭಾಗಿತ್ವದಲ್ಲಿ ಪತ್ರಕರ್ತರ ಸಂಘದ ಸದಸ್ಯರಿಗೆ ಹಮ್ಮಿಕೊಂಡಿದ್ದ ಅಂಚೆ ವಿಮಾ ಯೋಜನೆಯ ನೋಂದಣಿ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.
ಅಂಚೆ ಇಲಾಖೆಯ ಮೂಲಕ ಆಧಾರ್ ನೋಂದಣಿ, ತಿದ್ದುಪಡಿ, ಅಂಚೆ ವಿಮೆ ಹಾಗೂ ವಿವಿಧ ಆರೋಗ್ಯ ವಿಮಾ ಯೋಜನೆಗಳ ಸೌಲಭ್ಯಗಳು ಲಭ್ಯವಿವೆ. ಕಡಿಮೆ ಮೊತ್ತದಲ್ಲಿ, ಕನಿಷ್ಠ ದಾಖಲೆಗಳೊಂದಿಗೆ ಹೆಚ್ಚಿನ ಪ್ರಯೋಜನಗಳನ್ನು ಪಡೆದುಕೊಳ್ಳಲು ಅವಕಾಶವಿದೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ 10 ಲಕ್ಷ ರೂ.ವರೆಗಿನ ಅಪಘಾತ ವಿಮಾ ಯೋಜನೆ ಅತ್ಯಂತ ಉಪಯುಕ್ತವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್. ವಹಿಸಿದ್ದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ವಂದಿಸಿದರು.
ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ಜಿಲ್ಲಾ ಸಂಘದ ಪೂರ್ವಾಧ್ಯಕ್ಷ ಹರ್ಷ ಹಾಗೂ ಭಾರತೀಯ ಅಂಚೆ ಇಲಾಖೆಯ ಪಾಂಡೇಶ್ವರ ಕೇಂದ್ರದ ನಿರೀಕ್ಷಕ ಪ್ರದೀಪ್ ಭಂಡಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.



