ಮಂಗಳೂರು, ನ.1: ಕನ್ನಡಾಭಿಮಾನವು ಇತರ ಭಾಷಿಗರನ್ನು ದೂರವಿಡುವ ಶಕ್ತಿಯಾಗದೆ, ಎಲ್ಲರನ್ನೂ ಪ್ರೀತಿ ಮತ್ತು ವಿಶ್ವಾಸದಿಂದ ಬೆಸೆಯುವ ಸೇತುವೆಯಾಗಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಹೇಳಿದರು.
ನಗರದ ನೆಹರು ಮೈದಾನದಲ್ಲಿ ನಡೆದ 71ನೇ ಕನ್ನಡ ರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕನ್ನಡ ಕೇವಲ ಭಾಷೆಯಲ್ಲ, ಅದು ನಮ್ಮ ಅಸ್ಮಿತೆ, ಸಂಸ್ಕೃತಿ ಮತ್ತು ಬದುಕಿನ ಅವಿಭಾಜ್ಯ ಅಂಗ. ಪಂಪ, ಬಸವಣ್ಣ, ಅಕ್ಕಮಹಾದೇವಿ, ಕನಕದಾಸ, ಕುವೆಂಪು ಸೇರಿದಂತೆ ಮಹನೀಯರ ಸಾಹಿತ್ಯ ಮತ್ತು ಚಿಂತನೆಗಳು ಮಾನವೀಯತೆ, ಸಮಾನತೆ ಹಾಗೂ ಸಾಮಾಜಿಕ ಪರಿವರ್ತನೆಗೆ ದಾರಿದೀಪವಾಗಿವೆ. ಕನ್ನಡಕ್ಕೆ ದೊರೆತಿರುವ ಎಂಟು ಜ್ಞಾನಪೀಠ ಪ್ರಶಸ್ತಿಗಳು ಭಾಷೆಯ ಸಾಹಿತ್ಯಿಕ ಶ್ರೀಮಂತಿಕೆಗೆ ಸಾಕ್ಷಿಯಾಗಿವೆ ಎಂದರು.
ಇಂದಿನ ಕೃತಕ ಬುದ್ಧಿಮತ್ತೆ, ತಂತ್ರಜ್ಞಾನ ಮತ್ತು ಡಿಜಿಟಲ್ ಯುಗದಲ್ಲಿ ಕನ್ನಡವೂ ಸಕ್ರಿಯವಾಗಿ ಬೆಳೆಯಬೇಕು. ಕನ್ನಡದ ಸಾಹಿತ್ಯ, ಉಪಭಾಷೆ, ಜನಪದ ಜ್ಞಾನವನ್ನು ಡಿಜಿಟಲ್ ರೂಪದಲ್ಲಿ ಸಂರಕ್ಷಿಸುವುದರ ಜೊತೆಗೆ ವಿಜ್ಞಾನ, ತಂತ್ರಜ್ಞಾನ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಕನ್ನಡದ ಬಳಕೆಯನ್ನು ವಿಸ್ತರಿಸಬೇಕು ಎಂದು ಹೇಳಿದರು.
ನಾಡಧ್ವಜಕ್ಕೆ ಅಧಿಕೃತ ಮಾನ್ಯತೆ, ಕನ್ನಡಿಗರಿಗೆ ಉದ್ಯೋಗಾವಕಾಶಗಳಲ್ಲಿ ಆದ್ಯತೆ, ಕೇಂದ್ರ ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ಕನ್ನಡಕ್ಕೆ ಅವಕಾಶ ಹಾಗೂ ಕನ್ನಡದ ಐತಿಹಾಸಿಕ ತಾಣಗಳ ಪುನರುಜ್ಜೀವನಕ್ಕೆ ಸರ್ಕಾರ ಬದ್ಧವಾಗಿದೆ. ನಾಡಧ್ವಜದ ಗೌರವವನ್ನು ಜನಸಂಕಲ್ಪವನ್ನಾಗಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದರು.
ಕನ್ನಡವನ್ನು ಪ್ರೀತಿಸುವುದಕ್ಕಾಗಿ ಇತರ ಭಾಷೆಗಳನ್ನು ದ್ವೇಷಿಸುವ ಅಗತ್ಯವಿಲ್ಲ. ನಮ್ಮ ಭಾಷೆಯನ್ನು ಪ್ರೀತಿಸಿ, ಇತರ ಭಾಷೆಗಳನ್ನು ಗೌರವಿಸುವುದೇ ನಿಜವಾದ ಭಾಷಾಭಿಮಾನ. ರಾಜ್ಯೋತ್ಸವವನ್ನು ಕೇವಲ ಸರ್ಕಾರಿ ಕಾರ್ಯಕ್ರಮವಾಗಿ ನೋಡದೆ ಪ್ರತಿಯೊಬ್ಬರೂ ಮನೆಯ ಹಬ್ಬವಾಗಿ ಆಚರಿಸಬೇಕು ಎಂದು ಕರೆ ನೀಡಿದರು.
ಪ್ರಶಸ್ತಿ ಪ್ರದಾನ: ಸಮಾರಂಭದಲ್ಲಿ 119 ಸಾಧಕರು ಹಾಗೂ 54 ಸಂಘ–ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪೊಲೀಸ್, ಎನ್‌ಸಿಸಿ ಹಾಗೂ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.
ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಾಹಿದ್, ಮೂಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಗಾಣಿಗ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟ್ಯಾನ್ಲಿ ಅಲ್ವಾರಿಸ್, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.



