ಮಂಗಳೂರು: ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗುವ ಸಾಧ್ಯತೆ ಇರುವುದರಿಂದ ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ನೀರಿನ ಮಿತಬಳಕೆ ಮತ್ತು ಸಂರಕ್ಷಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಭಾನುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕುಡಿಯುವ ನೀರು ಹಾಗೂ ವಿವಿಧ ಇಲಾಖೆಗಳ ಪ್ರಗತಿ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಬೇಸಿಗೆಯಲ್ಲಿ ನೀರಿನ ಅಭಾವ ಎದುರಾಗುವ ಸಾಧ್ಯತೆ ಇದೆ. ಸಾರ್ವಜನಿಕರು ಕುಡಿಯುವ ನೀರನ್ನು ಅನಗತ್ಯವಾಗಿ ಪೋಲು ಮಾಡದೆ ಮಿತವಾಗಿ ಬಳಸುವಂತೆ ಸ್ಥಳೀಯಾಡಳಿತ ಸಂಸ್ಥೆಗಳು ಹಾಗೂ ಸಂಬಂಧಪಟ್ಟ ಇಲಾಖೆಗಳ ಮೂಲಕ ಜಾಗೃತಿ ಅಭಿಯಾನ ಹಮ್ಮಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಸಾರ್ವಜನಿಕರು ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಬಾರದು ಎಂದು ಸೂಚಿಸಿದರು.
ಕುಡಿಯುವ ನೀರು ಪೂರೈಕೆ ಹಾಗೂ ಅಗತ್ಯ ಕಾಮಗಾರಿಗಳಿಗಾಗಿ ಜಿಲ್ಲಾಧಿಕಾರಿ ಮತ್ತು ತಾಲೂಕು ತಹಸೀಲ್ದಾರರ ಖಾತೆಗಳಲ್ಲಿ ಈಗಾಗಲೇ ಸಾಕಷ್ಟು ಅನುದಾನ ಲಭ್ಯವಿದೆ. ಅನುದಾನ ಕೊರತೆಯಾದಲ್ಲಿ ಹೆಚ್ಚುವರಿ ಅನುದಾನಕ್ಕಾಗಿ ತಕ್ಷಣ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.



