ಪುತ್ತೂರು: ಕ್ಷೇತ್ರದ ಪ್ರತಿಯೊಂದು ಮಗುವಿಗೂ ಗುಣಮಟ್ಟದ ಶಿಕ್ಷಣ, ಯುವಕರಿಗೆ ಉದ್ಯೋಗ ಹಾಗೂ ಜನತೆಗೆ ಉತ್ತಮ ಆರೋಗ್ಯ ಸೇವೆ ಒದಗಿಸುವುದು ನನ್ನ ಪ್ರಮುಖ ಆದ್ಯತೆಯಾಗಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು.
ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ 30ನೇ ಅಕ್ರಮ-ಸಕ್ರಮ ಬೈಠಕ್ ಹಾಗೂ 94ಸಿ ಹಕ್ಕುಪತ್ರ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ 19 ಕಡೆಗಳಲ್ಲಿ ಕೆಪಿಎಸ್ (ಕರ್ನಾಟಕ ಪಬ್ಲಿಕ್ ಸ್ಕೂಲ್) ಶಾಲೆಗಳನ್ನು ಆರಂಭಿಸಲು ಸರ್ಕಾರದೊಂದಿಗೆ ಮಾತುಕತೆ ನಡೆಸಲಾಗಿದೆ. ಈಗಾಗಲೇ ಐದು ಕೆಪಿಎಸ್ ಶಾಲೆಗಳಿಗೆ ಮಂಜೂರಾತಿ ದೊರೆತಿದೆ. ಬಡವರ್ಗದ ಮಕ್ಕಳೂ ಕನ್ನಡದ ಜೊತೆಗೆ ಆಂಗ್ಲ ಭಾಷೆಯಲ್ಲಿ ಶಿಕ್ಷಣ ಪಡೆಯಬೇಕು. ಇದರಿಂದ ಭವಿಷ್ಯದಲ್ಲಿ ಉದ್ಯೋಗಾವಕಾಶಗಳನ್ನು ಪಡೆದುಕೊಳ್ಳಲು ಅನುಕೂಲವಾಗಲಿದೆ ಎಂದರು.
ವಿದ್ಯಾವಂತ ನಿರುದ್ಯೋಗಿ ಯುವಕರಿಗೆ ಸೂಕ್ತ ಉದ್ಯೋಗ ದೊರೆಯಬೇಕು. ಮೆಡಿಕಲ್ ಕಾಲೇಜು ಆರಂಭವಾದ ಬಳಿಕ ಸುಮಾರು 25 ಸಾವಿರ ಉದ್ಯೋಗಾವಕಾಶಗಳು ಸೃಷ್ಟಿಯಾಗುವ ನಿರೀಕ್ಷೆಯಿದೆ. ಕೇವಲ ರಸ್ತೆ ನಿರ್ಮಾಣವೊಂದೇ ಅಭಿವೃದ್ಧಿಯಲ್ಲ; ಜನರ ಸಮಸ್ಯೆಗಳಿಗೆ ಸ್ಪಂದಿಸಿ ಅವರ ಸಂಕಷ್ಟಗಳಿಗೆ ಪರಿಹಾರ ಒದಗಿಸುವುದೂ ನಿಜವಾದ ಅಭಿವೃದ್ಧಿಯಾಗಿದೆ ಎಂದು ಹೇಳಿದರು.
ಕಳೆದ ಮೂರು ವರ್ಷಗಳಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 2,000 ಎಕರೆಗೂ ಅಧಿಕ ಭೂಮಿಯನ್ನು ರೈತರಿಗೆ ಸಕ್ರಮಗೊಳಿಸಿ ನೀಡಲಾಗಿದೆ. ಹಲವು ವರ್ಷಗಳಿಂದ ತಮ್ಮ ಭೂಮಿಯ ಹಕ್ಕಿಗಾಗಿ ಅರ್ಜಿ ಸಲ್ಲಿಸಿ ಕಚೇರಿಗಳಿಗೆ ಅಲೆದಾಡುತ್ತಿದ್ದ ಬಡ ಜನರಿಗೆ ಅವರ ಮನೆ ಬಾಗಿಲಿಗೆ ತೆರಳಿ ಭೂಮಿ ಮಂಜೂರು ಮಾಡಿಸುವ ಕೆಲಸ ಮಾಡಲಾಗಿದೆ. ಹಿಂದೆ ಪ್ರಭಾವಿಗಳಿಗೆ ಮಾತ್ರ ಭೂಮಿ ಮಂಜೂರಾತಿ ದೊರೆಯುತ್ತಿತ್ತು, ಬಡವರ ಸಮಸ್ಯೆಗಳಿಗೆ ಸ್ಪಂದಿಸುವವರಿರಲಿಲ್ಲ. ಚುನಾವಣೆಯ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಜನರಿಗೆ ನ್ಯಾಯ ಒದಗಿಸುವ ಕೆಲಸ ಮಾಡಲಾಗಿದೆ ಎಂದರು.
ದಕ್ಷಿಣ ಕನ್ನಡ ಜಿಲ್ಲೆಯ ಇತರ ವಿಧಾನಸಭಾ ಕ್ಷೇತ್ರಗಳಿಗೆ ಹೋಲಿಸಿದರೆ ಪುತ್ತೂರಿನಲ್ಲಿ ಅಕ್ರಮ-ಸಕ್ರಮ ಬೈಠಕ್ ವ್ಯವಸ್ಥಿತವಾಗಿ ನಡೆಯುತ್ತಿದ್ದು, ರಾಜ್ಯದಲ್ಲೇ ಪುತ್ತೂರು ಮುಂಚೂಣಿಯಲ್ಲಿದೆ. ಜನರ ಸಹಕಾರ ಹಾಗೂ ಅಧಿಕಾರಿಗಳ ಉತ್ಸಾಹದಿಂದ ಇದು ಸಾಧ್ಯವಾಗಿದೆ. ಮುಂದಿನ ದಿನಗಳಲ್ಲಿಯೂ ಪ್ರತೀ ಮಂಗಳವಾರ ಅಕ್ರಮ-ಸಕ್ರಮ ಬೈಠಕ್ ಮುಂದುವರಿಯಲಿದೆ ಎಂದು ತಿಳಿಸಿದರು.
ಶಾಸಕನಾದ ಬಳಿಕ ಕ್ಷೇತ್ರದ ಎಲ್ಲಾ ಧರ್ಮಗಳ ಆರಾಧನಾ ಕೇಂದ್ರಗಳ ಅಭಿವೃದ್ಧಿಗೆ ಅನುದಾನ ನೀಡಲಾಗಿದೆ. ದೇವಸ್ಥಾನ, ಮಸೀದಿ, ಚರ್ಚ್ ಹಾಗೂ ಬಸದಿ ಸೇರಿದಂತೆ ಎಲ್ಲ ಧಾರ್ಮಿಕ ಕೇಂದ್ರಗಳಿಗೂ ನೆರವು ಒದಗಿಸಲಾಗಿದೆ. ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೂ ವಿಶೇಷ ಅನುದಾನ ನೀಡಲಾಗಿದೆ ಎಂದು ಹೇಳಿದರು.
ದೇವಸ್ಥಾನದ ಜಾಗದ ಒತ್ತುವರಿಯನ್ನು ತೆರವುಗೊಳಿಸುವ ಮೂಲಕ ಭೂ ಒತ್ತುವರಿದಾರರಿಗೆ ಎಚ್ಚರಿಕೆ ನೀಡಲಾಗಿದೆ. ದೇವಸ್ಥಾನದ ಅಭಿವೃದ್ಧಿಯನ್ನು ಸಹಿಸದ ಕೆಲವರು ಭಕ್ತರ ಹೆಸರಿನಲ್ಲಿ ದೇವಸ್ಥಾನದ ಹೆಸರಿಗೆ ಧಕ್ಕೆ ತರುವ ಪ್ರಯತ್ನ ಮಾಡುತ್ತಿದ್ದಾರೆ. ಯಾರೇ ಅಡ್ಡಿಪಡಿಸಿದರೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸಿಯೇ ತೀರುತ್ತೇನೆ ಎಂದು ಶಾಸಕ ಅಶೋಕ್ ರೈ ಹೇಳಿದರು.
ಕಾರ್ಯಕ್ರಮದಲ್ಲಿ ಅಕ್ರಮ-ಸಕ್ರಮ ಸಮಿತಿ ಸದಸ್ಯರಾದ ಮಹಮ್ಮದ್ ಬಡಗನ್ನೂರು, ಸಮಿತಿಯ ಕಾರ್ಯದರ್ಶಿ ಹಾಗೂ ತಹಶೀಲ್ದಾರ್ ಎಸ್.ಬಿ. ಕೂಡಲಗಿ, ಸಮಿತಿ ಸದಸ್ಯರಾದ ರಾಮಣ್ಣ ಪಿಲಿಂಜ ಹಾಗೂ ರೂಪರೇಖಾ ಆಳ್ವ ಉಪಸ್ಥಿತರಿದ್ದರು. ಕಂದಾಯ ನಿರೀಕ್ಷಕ ಚಂದ್ರ ಕಾರ್ಯಕ್ರಮ ನಿರೂಪಿಸಿದರು.




