ಉಜಿರೆ: ಅಳಿಕೆ ಸತ್ಯಸಾಯಿ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಚಂದ್ರಶೇಖರ ಭಟ್ ಅವರ ನೇತೃತ್ವದಲ್ಲಿ ಶಿಕ್ಷಕರು ಹಾಗೂ 36 ವಿದ್ಯಾರ್ಥಿಗಳ ತಂಡ ಮಂಗಳವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಗೌರವಾರ್ಪಣೆ ಸಲ್ಲಿಸಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಚಂದ್ರಶೇಖರ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ, ಅಳಿಕೆ ಹಾಗೂ ಧರ್ಮಸ್ಥಳದ ನಡುವೆ ಅವಿನಾಭಾವ ಸಂಬಂಧವಿದೆ. ಅಳಿಕೆಯ ಶಿಕ್ಷಣ ಸಂಸ್ಥೆಗಳ ಪ್ರಗತಿಗೆ ಧರ್ಮಾಧಿಕಾರಿ ಹೆಗ್ಗಡೆಯವರು ನೀಡಿರುವ ಕೊಡುಗೆ ಅಪಾರವಾಗಿದೆ ಎಂದು ಶ್ಲಾಘಿಸಿ ಕೃತಜ್ಞತೆ ಸಲ್ಲಿಸಿದರು.
ಅಳಿಕೆಯಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಶಿಕ್ಷಣ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿದ ಮಡಿಯಾಲ ನಾರಾಯಣ ಭಟ್ ಅವರ ಸೇವೆಯನ್ನು ಸ್ಮರಿಸಿದ ಅವರು, ಇದೇ ನವೆಂಬರ್ 29ರ ಭಾನುವಾರ ಮಡಿಯಾಲ ನಾರಾಯಣ ಭಟ್ ಅವರ ಜನ್ಮಶತಮಾನೋತ್ಸವ ಸಮಾರಂಭವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮಕ್ಕೆ ಧರ್ಮಾಧಿಕಾರಿ ಹೆಗ್ಗಡೆಯವರನ್ನು ಆತ್ಮೀಯವಾಗಿ ಆಹ್ವಾನಿಸಿದರು.
ಅಳಿಕೆಯ ಶಿಕ್ಷಣ ಸಂಸ್ಥೆಗಳು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಸೇವೆ ಹಾಗೂ ಸಾಧನೆಗಳನ್ನು ಶ್ಲಾಘಿಸಿದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಸಂಸ್ಥೆಗಳು ಮುಂದಿನ ದಿನಗಳಲ್ಲಿಯೂ ಇನ್ನಷ್ಟು ಪ್ರಗತಿ ಸಾಧಿಸಿ ಸಮಾಜಕ್ಕೆ ಉತ್ತಮ ಕೊಡುಗೆ ನೀಡಲಿ ಎಂದು ಶುಭ ಹಾರೈಸಿದರು.




