ಮಂಜೇಶ್ವರ: ಮಂಜೇಶ್ವರ ಬ್ಲಾಕ್ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಬಡ ಜನರಿಗೆ ಮನೆ ನಿರ್ಮಾಣಕ್ಕಾಗಿ ಮಂಜೂರಾದ 17 ಲಕ್ಷ ರೂ. ಹಣದ ದುರುಪಯೋಗ ನಡೆದಿರುವ ಆರೋಪ ಕೇಳಿಬಂದಿದ್ದು, ಈ ಕುರಿತು ಸಮಗ್ರ ತನಿಖೆ ನಡೆಸುವಂತೆ ಬಿಜೆಪಿ ಮಂಜೇಶ್ವರ ಮಂಡಲ ಸಮಿತಿ ಆಗ್ರಹಿಸಿದೆ.
ಪ್ರಧಾನಮಂತ್ರಿ ಆವಾಸ್ ಯೋಜನೆಯ ಹಣ ದುರುಪಯೋಗವಾಗಿರುವ ಬಗ್ಗೆ ಬಿಜೆಪಿ ವತಿಯಿಂದ ಪ್ರಧಾನಮಂತ್ರಿ ಕಚೇರಿಗೆ ದೂರು ಸಲ್ಲಿಸಲಾಗಿದೆ. ಬಡವರ ಮನೆ ನಿರ್ಮಾಣಕ್ಕೆ ಮೀಸಲಾದ ಅನುದಾನದಲ್ಲಿ ಅಕ್ರಮ ನಡೆದಿರುವುದು ಗಂಭೀರ ವಿಚಾರವಾಗಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಒತ್ತಾಯಿಸಿದೆ.
ಈ ಹಿನ್ನೆಲೆಯಲ್ಲಿ ಮಂಜೇಶ್ವರ ಬ್ಲಾಕ್ ಪಂಚಾಯತ್ ಅಧ್ಯಕ್ಷರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಮಂಜೇಶ್ವರ ಮಂಡಲ ಅಧ್ಯಕ್ಷ ಅಬ್ದುಲ್ ರಹ್ಮಾನ್ ಬಿ.ಎಂ ಆಗ್ರಹಿಸಿದ್ದಾರೆ.




