ಬೆಂಗಳೂರು: ರಾಜ್ಯದಲ್ಲಿ ಅವಧಿ ಪೂರ್ಣಗೊಂಡು ಚುನಾವಣೆ ನಡೆಯಬೇಕಿರುವ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ವಾರ್ಡ್ವಾರು ಮೀಸಲಾತಿ ನಿಗದಿಪಡಿಸಲು ರಾಜ್ಯ ಸರ್ಕಾರ ಸಮಿತಿ ರಚಿಸಿದೆ. ಈ ಕುರಿತು ರಾಜ್ಯ ಸರ್ಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ.
ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ವಾರು ಮೀಸಲಾತಿಯ ಅಂತಿಮ ಅಧಿಸೂಚನೆಯನ್ನು ತುರ್ತಾಗಿ ಹೊರಡಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸೇರಿದಂತೆ ವಿವಿಧ ರಿಟ್ ಅರ್ಜಿಗಳ ವಿಚಾರಣೆಯನ್ನು ಬುಧವಾರ ಹೈಕೋರ್ಟ್ನ ವಿಭಾಗೀಯ ನ್ಯಾಯಪೀಠ ನಡೆಸಿತು. ನ್ಯಾಯಮೂರ್ತಿ ಅನು ಶಿವರಾಮನ್ ಹಾಗೂ ನ್ಯಾಯಮೂರ್ತಿ ಕೆ.ಎಸ್. ಭರತ್ ಕುಮಾರ್ ಅವರಿದ್ದ ಪೀಠ ವಿಚಾರಣೆ ನಡೆಸಿತು.
ರಾಜ್ಯ ಸರ್ಕಾರದ ಪರ ಹಾಜರಾಗಿದ್ದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಪ್ರತಿಮಾ ಹೊನ್ನಾಪುರ ಅವರು ಮೆಮೊ ಸಲ್ಲಿಸಿ, ವಾರ್ಡ್ವಾರು ಮೀಸಲಾತಿ ನಿಗದಿಪಡಿಸಲು ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಈ ಸಂಬಂಧ 2026ರ ಅಕ್ಟೋಬರ್ 3ರಂದು ಅಧಿಸೂಚನೆ ಹೊರಡಿಸಲಾಗಿದೆ ಎಂದು ತಿಳಿಸಿದರು.
ಸಮಿತಿಯಲ್ಲಿ ಸಮಾಜ ಕಲ್ಯಾಣ, ಕಾನೂನು, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಕಾರ್ಯದರ್ಶಿಗಳು ಮತ್ತು ಪೌರಾಡಳಿತ ನಿರ್ದೇಶಕರು ಸದಸ್ಯರಾಗಿದ್ದಾರೆ. ವಾರ್ಡ್ವಾರು ಮೀಸಲಾತಿ ನಿಗದಿ ಪ್ರಕ್ರಿಯೆ ಆರಂಭವಾಗಿದ್ದು, ಈ ಅಂಶವನ್ನು ನ್ಯಾಯಾಲಯ ದಾಖಲಿಸಿಕೊಂಡು ಸರ್ಕಾರಕ್ಕೆ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು.
ಸರ್ಕಾರ ಮತ್ತೆ ಕಾಲಾವಕಾಶ ಕೋರಿದ್ದಕ್ಕೆ ರಾಜ್ಯ ಚುನಾವಣಾ ಆಯೋಗದ ಪರ ವಕೀಲೆ ವೈಶಾಲಿ ಹೆಗಡೆ ಆಕ್ಷೇಪ ವ್ಯಕ್ತಪಡಿಸಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಸರ್ಕಾರದ ಪರ ವಕೀಲರ ಹೇಳಿಕೆಯನ್ನು ದಾಖಲಿಸಿಕೊಂಡು ವಿಚಾರಣೆಯನ್ನು ಡಿಸೆಂಬರ್ 15ಕ್ಕೆ ಮುಂದೂಡಿತು.




