ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹೊಸ ವಲಯ ನಿಯಮಾವಳಿಗಳು, ಕಟ್ಟಡ ಪರವಾನಿಗೆ ಪ್ರಕ್ರಿಯೆಯಲ್ಲಿನ ತಾಂತ್ರಿಕ ಸಮಸ್ಯೆಗಳು ಹಾಗೂ ಲೇಔಟ್ ಅನುಮೋದನೆಯಲ್ಲಿನ ವಿಳಂಬದಿಂದಾಗಿ ಜನಸಾಮಾನ್ಯರು ಮತ್ತು ಮನೆ ನಿರ್ಮಾಣ ಮಾಡುವವರು ತೀವ್ರ ತೊಂದರೆ ಅನುಭವಿಸುವಂತಾಗಿದೆ ಎಂದು ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಆರೋಪಿಸಿದ್ದಾರೆ.
ಮಂಗಳೂರು ಪ್ರೆಸ್ ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರಿನ ಜನರ ಹಿತಾಸಕ್ತಿಯನ್ನು ಕಡೆಗಣಿಸದೆ ಹೊಸ ವಲಯ ನಿಯಮಾವಳಿಗಳನ್ನು ಮರುಪರಿಶೀಲಿಸಿ, ನ್ಯಾಯಯುತ ಕ್ರಮಗಳನ್ನು ತಕ್ಷಣ ಕೈಗೊಳ್ಳುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.
ಟೆಲಿಸ್ಕೋಪಿಕ್ ಸೆಟ್ಬ್ಯಾಕ್ ನಿಯಮ ಜಾರಿಯಾದರೆ, ಹೊಸದಾಗಿ ನಿರ್ಮಾಣವಾಗುವ ಏಳು ಅಂತಸ್ತಿನ ಬಹುಮಹಡಿ ಕಟ್ಟಡಗಳಲ್ಲಿ ನೆಲಮಟ್ಟದ ಸೆಟ್ಬ್ಯಾಕ್ ಕೇವಲ ಒಂದು ಮೀಟರ್ಗೆ ಸೀಮಿತವಾಗಲಿದೆ. ಇದರಿಂದ ಯಾವುದೇ ಅವಘಡ ಸಂಭವಿಸಿದ ಸಂದರ್ಭದಲ್ಲಿ ಅಗ್ನಿಶಾಮಕ ವಾಹನಗಳು ಕಟ್ಟಡದೊಳಗೆ ಪ್ರವೇಶಿಸಲು ಸೂಕ್ತ ಸ್ಥಳಾವಕಾಶವಿಲ್ಲದ ಅಪಾಯ ಎದುರಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ನಿಯಮ 6.9.8ರ ಟೆಲಿಸ್ಕೋಪಿಕ್ ಸೆಟ್ಬ್ಯಾಕ್ ನಿಯಮವನ್ನು ತಕ್ಷಣ ರದ್ದುಗೊಳಿಸಬೇಕು. ತಜ್ಞರು ಹಾಗೂ ಅಗ್ನಿಶಾಮಕ ಇಲಾಖೆಯ ಅಭಿಪ್ರಾಯ ಪಡೆದು ಸುರಕ್ಷಿತ ಮತ್ತು ವೈಜ್ಞಾನಿಕ ಮಾನದಂಡಗಳನ್ನು ರೂಪಿಸಬೇಕು ಎಂದು ಒತ್ತಾಯಿಸಿದರು.
ಇದಲ್ಲದೆ, ಮಂಗಳೂರಿನ ಹಲವು ಪ್ರದೇಶಗಳು ಹಿಂದುಳಿದಿದ್ದು, ಸೂಕ್ತ ರಸ್ತೆ ಸಂಪರ್ಕದ ಕೊರತೆ ಎದುರಿಸುತ್ತಿವೆ. ಈ ಪ್ರದೇಶಗಳಲ್ಲಿರುವ ಧಾರ್ಮಿಕ ಕೇಂದ್ರಗಳ ನಿರ್ವಹಣೆ ಮತ್ತು ವಿಸ್ತರಣಾ ಕಾರ್ಯಗಳಿಗೆ ಅಗತ್ಯವಾದ ರಸ್ತೆ ಸಂಪರ್ಕ ಇಲ್ಲದ ಕಾರಣ ಕಟ್ಟಡ ಪರವಾನಿಗೆ ಪಡೆಯುವುದಕ್ಕೂ ತೊಂದರೆಯಾಗುವ ಸಾಧ್ಯತೆಯಿದೆ. ಇದರಿಂದ ಸರ್ಕಾರದ ಅನುದಾನ ಹಾಗೂ ಇತರ ಮೂಲಸೌಕರ್ಯ ಸೌಲಭ್ಯಗಳು ದೊರೆಯುವುದಕ್ಕೂ ಅಡ್ಡಿಯಾಗಬಹುದು. ಆದ್ದರಿಂದ ಧಾರ್ಮಿಕ ಕ್ಷೇತ್ರಗಳಿಗೆ ಸಂಬಂಧಿಸಿದ ನಿಯಮಗಳನ್ನು ಮರುಪರಿಶೀಲಿಸಿ, ಜನರಿಗೆ ತೊಂದರೆಯಾಗದಂತೆ ಅಗತ್ಯ ಬದಲಾವಣೆಗಳನ್ನು ಮಾಡಬೇಕು ಎಂದು ಕೃಷ್ಣ ಜೆ. ಪಾಲೆಮಾರ್ ಆಗ್ರಹಿಸಿದರು.



