ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) 2011ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಅಧಿಕಾರಿಗಳ ನೇಮಕಾತಿಯನ್ನು ರದ್ದುಗೊಳಿಸಿರುವ ಸುಪ್ರೀಂ ಕೋರ್ಟ್ ತೀರ್ಪಿನಿಂದ ಸಂಕಷ್ಟಕ್ಕೆ ಸಿಲುಕಿರುವ ಅಧಿಕಾರಿಗಳು ಇದೀಗ ಡಿ.ಕೆ. ಶಿವಕುಮಾರ್ ಅವರ ಮೊರೆ ಹೋಗಿದ್ದಾರೆ.
2011ರಲ್ಲಿ ಕೆಪಿಎಸ್ಸಿ ಮೂಲಕ ಗ್ರೂಪ್ ಎ ಮತ್ತು ಬಿ ವೃಂದದ 362 ಹುದ್ದೆಗಳಿಗೆ ನಡೆದ ನೇಮಕಾತಿ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರ ಮತ್ತು ಸ್ವಜನಪಕ್ಷಪಾತ ನಡೆದಿರುವುದು ತನಿಖೆಯಲ್ಲಿ ಬಹಿರಂಗವಾಗಿತ್ತು. ಈ ಹಿನ್ನೆಲೆಯಲ್ಲಿ 2014ರಲ್ಲಿ ರಾಜ್ಯ ಸರ್ಕಾರ ನೇಮಕಾತಿ ರದ್ದುಪಡಿಸಿತ್ತು. ಬಳಿಕ 2022ರಲ್ಲಿ ಹಿಂದಿನ ಸರ್ಕಾರ ನೇಮಕಾತಿಯನ್ನು ಮಾನ್ಯಗೊಳಿಸುವ ಕಾಯ್ದೆ ಜಾರಿಗೆ ತಂದಿತ್ತು.
ಆದರೆ, ಅಕ್ಟೋಬರ್ 29ರಂದು ಸುಪ್ರೀಂ ಕೋರ್ಟ್ 2022ರ ಕಾಯ್ದೆಯನ್ನು ಅಸಂವಿಧಾನಿಕ ಎಂದು ಘೋಷಿಸಿ ರದ್ದುಗೊಳಿಸಿದೆ. ಇದರೊಂದಿಗೆ ಆ ಕಾಯ್ದೆಯ ಆಧಾರದಲ್ಲಿ ನೇಮಕಗೊಂಡ ಅಧಿಕಾರಿಗಳ ನೇಮಕಾತಿಯೂ ರದ್ದಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಹಿನ್ನೆಲೆಯಲ್ಲಿ ಬಾಧಿತ ಅಧಿಕಾರಿಗಳು ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ತಮ್ಮ ಸೇವೆಯ ಭವಿಷ್ಯದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ತಮ್ಮ ಉದ್ಯೋಗವನ್ನು ಉಳಿಸಿಕೊಳ್ಳಲು ಸರ್ಕಾರ ಸೂಕ್ತ ಕಾನೂನು ಪರಿಹಾರ ಕಂಡುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಸುಪ್ರೀಂ ಕೋರ್ಟ್ ಖಾಲಿ ಇರುವ ಗ್ರೂಪ್ ಎ ಮತ್ತು ಬಿ ಹುದ್ದೆಗಳಿಗೆ ಹೊಸದಾಗಿ ನೇಮಕಾತಿ ಪ್ರಕ್ರಿಯೆ ನಡೆಸುವಂತೆ ಸೂಚಿಸಿದ್ದು, ಅರ್ಹ ಅಭ್ಯರ್ಥಿಗಳಿಗೆ ಒಂದು ಬಾರಿಯ ವಯೋಮಿತಿ ಸಡಿಲಿಕೆಯನ್ನೂ ನೀಡುವಂತೆ ನಿರ್ದೇಶಿಸಿದೆ. ಹೊಸ ನೇಮಕಾತಿಯಲ್ಲಿ ಆಯ್ಕೆಯಾಗುವವರಿಗೆ ಹೊಸ ನೇಮಕಾತಿಯ ದಿನಾಂಕದಿಂದಲೇ ಸೇವಾ ಹಿರಿತನ ಅನ್ವಯವಾಗಲಿದೆ.



