ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಶಿಕ್ಷಕರ ವರ್ಗಾವಣೆ ನೀತಿಯಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಿದ್ದು, ಈ ಕುರಿತು ಕರಡು ಅಧಿಸೂಚನೆ ಪ್ರಕಟಿಸಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ತಾಲೂಕುವಾರು ಖಾಲಿ ಹುದ್ದೆಗಳ ಶೇಕಡಾವಾರು ಮಿತಿಯನ್ನು ಶೇ.25ಕ್ಕೆ ಸಡಿಲಿಸಲಾಗಿದ್ದು, ಇದರಿಂದ ಹೆಚ್ಚಿನ ಶಿಕ್ಷಕರಿಗೆ ವರ್ಗಾವಣೆಗೆ ಅವಕಾಶ ದೊರೆಯಲಿದೆ. ವರ್ಗಾವಣೆ ಪ್ರಕ್ರಿಯೆಯನ್ನು ಸರಳ ಹಾಗೂ ಪಾರದರ್ಶಕಗೊಳಿಸುವುದರ ಜೊತೆಗೆ ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ವರ್ಗಾವಣೆಯಾಗುವ ಶಿಕ್ಷಕರಿಗೆ ಮೊದಲ ಆದ್ಯತೆ ನೀಡಲಾಗಿದೆ.
ಕೆಪಿಎಸ್ ಶಾಲೆಗಳಲ್ಲಿ ಕಾರ್ಯನಿರ್ವಹಿಸುವ ಶಿಕ್ಷಕರಿಗೆ ಹೆಚ್ಚುವರಿ ಕೃಪಾಂಕ ನೀಡಲಾಗುವುದು. ಈ ಶಾಲೆಗಳಲ್ಲಿ ಕನಿಷ್ಠ ಸೇವಾವಧಿಯನ್ನು 9 ವರ್ಷಗಳಿಗೆ ನಿಗದಿಪಡಿಸಲಾಗಿದೆ. ಗರ್ಭಿಣಿ ಶಿಕ್ಷಕಿಯರು, ಐದು ವರ್ಷದೊಳಗಿನ ಮಕ್ಕಳಿರುವ ತಾಯಂದಿರು, ಅನಾರೋಗ್ಯಪೀಡಿತರು ಹಾಗೂ ವಿಶೇಷ ಚೇತನ ಶಿಕ್ಷಕರಿಗೂ ವಿಶೇಷ ವಿನಾಯಿತಿ ಕಲ್ಪಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಕರಡು ಅಧಿಸೂಚನೆಗೆ ಸಾರ್ವಜನಿಕರು ಹಾಗೂ ಶಿಕ್ಷಕರು ಸಲಹೆ ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ.



