ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಯಲಿಹಡಲಗಿ ಗ್ರಾಮದಿಂದ ಅಡಹಳಟ್ಟಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಹೊಂಡ-ಗುಂಡಿಗಳಿಂದ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ರಸ್ತೆ ದುರಸ್ತಿಗೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮುಂದಾಗುತ್ತಿಲ್ಲ ಎಂಬ ಆರೋಪವನ್ನು ಗ್ರಾಮಸ್ಥರು ಮಾಡಿದ್ದಾರೆ.
ಈ ರಸ್ತೆಯಲ್ಲಿ ಪ್ರತಿದಿನ ನೂರಾರು ವಾಹನಗಳು ಸಂಚರಿಸುತ್ತಿದ್ದು, ರಸ್ತೆ ತುಂಬಾ ಹೊಂಡಗಳು ನಿರ್ಮಾಣವಾಗಿರುವುದರಿಂದ ದ್ವಿಚಕ್ರ ವಾಹನ ಸವಾರರು ಜೀವಭಯದಲ್ಲೇ ಪ್ರಯಾಣಿಸುವಂತಾಗಿದೆ. ಗ್ರಾಮಸ್ಥರ ಪ್ರಕಾರ, ಆಗಾಗ ಅಪಘಾತಗಳು ಸಂಭವಿಸುತ್ತಿದ್ದು, ಒಂದು ದಿನ ಬಿಟ್ಟು ಮತ್ತೊಂದು ದಿನ ಅಪಘಾತ ನಡೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಕುರಿತು ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ಮಹಿಳಾ ಸಬಲೀಕರಣ ಹೋರಾಟ ಸಮಿತಿಯ ರಾಜ್ಯ ಮಾಧ್ಯಮ ವಕ್ತಾರ ಮಹೇಶ್ ಶರ್ಮಾ ಅವರು ಮಾಧ್ಯಮಗಳ ಮೂಲಕ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನ ಸೆಳೆದಿದ್ದಾರೆ. ಹಲವು ಬಾರಿ ಮನವಿ ಸಲ್ಲಿಸಿ, ಮಾಧ್ಯಮಗಳ ಮೂಲಕ ಸಮಸ್ಯೆ ಪ್ರಕಟಿಸಿದರೂ ರಸ್ತೆ ಸುಧಾರಣೆಗೆ ಕ್ರಮ ಕೈಗೊಂಡಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಚುನಾವಣೆ ಸಂದರ್ಭದಲ್ಲಿ ರಸ್ತೆ ಅಭಿವೃದ್ಧಿ ಸೇರಿದಂತೆ ಹಲವು ಭರವಸೆಗಳನ್ನು ನೀಡುವ ಜನಪ್ರತಿನಿಧಿಗಳು, ನಂತರ ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯ ಸಮಸ್ಯೆಗಳತ್ತ ಗಮನಹರಿಸುತ್ತಿಲ್ಲ ಎಂಬುದು ಸ್ಥಳೀಯರ ಆರೋಪವಾಗಿದೆ. ಅಥಣಿ ತಾಲೂಕಿನ ಹಲವು ಗ್ರಾಮಗಳಲ್ಲಿಯೂ ಇದೇ ರೀತಿಯ ರಸ್ತೆ ಸಮಸ್ಯೆಗಳಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ತಾಲೂಕು ಆಡಳಿತ ಹಾಗೂ ಜಿಲ್ಲಾ ಆಡಳಿತ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳು ತಕ್ಷಣವೇ ಸ್ಥಳ ಪರಿಶೀಲನೆ ನಡೆಸಿ ರಸ್ತೆ ದುರಸ್ತಿ ಕಾರ್ಯ ಕೈಗೊಳ್ಳಬೇಕು. ವಾಹನ ಸವಾರರು ಹಾಗೂ ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಯಲಿಹಡಲಗಿ–ಅಡಹಳಟ್ಟಿ ರಸ್ತೆ ಸಂಪೂರ್ಣ ದುಸ್ಥಿತಿ: ಗ್ರಾಮಸ್ಥರ ಆಕ್ರೋಶ, ತಕ್ಷಣ ದುರಸ್ತಿಗೆ ಆಗ್ರಹ
Previous Article
ಮಂಗಳೂರು ವಿವಿಯಲ್ಲಿ ನ.17ರಿಂದ ಮಕ್ಕಳ ಚಲನಚಿತ್ರೋತ್ಸವ
ಮಂಗಳೂರು ವಿವಿಯಲ್ಲಿ ನ.17ರಿಂದ ಮಕ್ಕಳ ಚಲನಚಿತ್ರೋತ್ಸವ

