ಮಂಗಳೂರು: ವಿಮಾನವೊಂದು ಟೇಕಾಫ್ ಆಗುವ ಹಂತದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ತಕ್ಷಣವೇ ಎಚ್ಚೆತ್ತುಕೊಂಡ ಪೈಲಟ್ ವಿಮಾನವನ್ನು ನಿಯಂತ್ರಿಸಿ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ. ವಿಮಾನದಲ್ಲಿದ್ದ 236 ಪ್ರಯಾಣಿಕರು ಸುರಕ್ಷಿತವಾಗಿದ್ದು, ಪೈಲಟ್ನ ಸಮಯಪ್ರಜ್ಞೆಯಿಂದ ಭಾರೀ ಅಪಾಯ ತಪ್ಪಿದಂತಾಗಿದೆ.
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಸಂಜೆ 6 ಗಂಟೆ ಸುಮಾರಿಗೆ ಟೇಕಾಫ್ ಹಂತದಲ್ಲಿ ಇಂಜಿನ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ವಿಮಾನ ವೇಗವಾಗಿ ಚಲಿಸುತ್ತಿದ್ದ ವೇಳೆ ದೋಷ ಗಮನಿಸಿದ ಪೈಲಟ್ ತಕ್ಷಣ ಬ್ರೇಕ್ ಹಾಕಿ ವಿಮಾನವನ್ನು ರನ್ವೇ ಕೊನೆಯಲ್ಲಿ ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿಮಾನದಲ್ಲಿದ್ದ 229 ಪ್ರಯಾಣಿಕರು ಹಾಗೂ 7 ಸಿಬ್ಬಂದಿ ಸೇರಿದಂತೆ ಒಟ್ಟು 236 ಮಂದಿ ಸುರಕ್ಷಿತವಾಗಿದ್ದಾರೆ. ಬಳಿಕ ಪ್ರಯಾಣಿಕರನ್ನು ವಿಮಾನದಿಂದ ಕೆಳಗಿಳಿಸಿ, ಇಂಡಿಗೋ ಸಂಸ್ಥೆ ಪರ್ಯಾಯ ವಿಮಾನದ ವ್ಯವಸ್ಥೆ ಮಾಡಿದೆ.




