ಬೆಂಗಳೂರು: ನಗರದ ಆರೋಗ್ಯ ಸೌಧದಲ್ಲಿ ರಾಜ್ಯದ ಎಲ್ಲ ಜಿಲ್ಲಾ ಆರೋಗ್ಯಾಧಿಕಾರಿಗಳು (DHO), ಜಿಲ್ಲಾ ಶಸ್ತ್ರಚಿಕಿತ್ಸಕರು ಹಾಗೂ ವಿವಿಧ ಆರೋಗ್ಯ ಕಾರ್ಯಕ್ರಮಗಳ ಉಪನಿರ್ದೇಶಕರೊಂದಿಗೆ ಆರೋಗ್ಯ ಇಲಾಖೆಯ ಮಹತ್ವದ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಸಭೆಯಲ್ಲಿ ಆರೋಗ್ಯ ಇಲಾಖೆಯ ವಿವಿಧ ಯೋಜನೆಗಳ ಅನುಷ್ಠಾನ ಹಾಗೂ ಜಿಲ್ಲಾಮಟ್ಟದಲ್ಲಿ ಸಾರ್ವಜನಿಕರಿಗೆ ದೊರೆಯುತ್ತಿರುವ ವೈದ್ಯಕೀಯ ಸೇವೆಗಳ ಕುರಿತು ವಿವರವಾಗಿ ಚರ್ಚಿಸಲಾಯಿತು. ಪ್ರತಿ ಜಿಲ್ಲೆಯಲ್ಲಿಯೂ ವಿವಿಧ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನದ ಪ್ರಗತಿಯನ್ನು ಪರಿಶೀಲಿಸಿ, ಅಧಿಕಾರಿಗಳಿಂದ ಸಲಹೆ ಮತ್ತು ಅಭಿಪ್ರಾಯಗಳನ್ನು ಪಡೆಯಲಾಯಿತು.
ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಗಳ ಮಾದರಿ ಕಾರ್ಯವೈಖರಿಯನ್ನು (Best Practices) ಇತರ ಜಿಲ್ಲೆಗಳಲ್ಲಿಯೂ ಅಳವಡಿಸಿಕೊಳ್ಳುವ ಕುರಿತು ಚರ್ಚಿಸಲಾಯಿತು.
ಪ್ರತಿಯೊಬ್ಬರಿಗೂ ಗುಣಮಟ್ಟದ ಆರೋಗ್ಯ ಸೇವೆ ಸಕಾಲದಲ್ಲಿ ತಲುಪಬೇಕು. ಇಲಾಖೆಯ ಯೋಜನೆಗಳು ಜನಸಾಮಾನ್ಯರಿಗೆ ಯಾವುದೇ ಅಡೆತಡೆಯಿಲ್ಲದೆ ದೊರೆಯಬೇಕು. ಎಲ್ಲ ಕಾರ್ಯಕ್ರಮಗಳನ್ನು ನಿಗದಿತ ಸಮಯದೊಳಗೆ ಅನುಷ್ಠಾನಗೊಳಿಸಬೇಕು. ಜಿಲ್ಲೆಗಳಲ್ಲಿ ಕಂಡುಬರುವ ಕೊರತೆಗಳನ್ನು ತಕ್ಷಣವೇ ಗುರುತಿಸಿ ಸರಿಪಡಿಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಯಿತು.
ಸಭೆಯಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಅಭಿಯಾನ ನಿರ್ದೇಶಕರು, ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.



