ಸುಳ್ಯ,: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಯುವಕ-ಯುವತಿಯರಲ್ಲಿ ಉದ್ಯಮಶೀಲತೆ ಹಾಗೂ ಆರ್ಥಿಕ ಸ್ವಾವಲಂಬನೆಯ ಅರಿವು ಮೂಡಿಸುವ ಉದ್ದೇಶದಿಂದ ಸುಳ್ಯದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಒಂದು ದಿನದ ಉಚಿತ ಉದ್ಯಮಶೀಲತಾ ಜಾಗೃತಿ ಕಾರ್ಯಕ್ರಮ ನಡೆಯಿತು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಧ್ಯಯನ ಮತ್ತು ಅಭಿವೃದ್ಧಿ ಟ್ರಸ್ಟ್ (ರಿ.), ಮಂಗಳೂರು ಹಾಗೂ ಎಂಆರ್ಪಿಎಲ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದ ಸಹಭಾಗಿತ್ವದಲ್ಲಿ, ಎಂಆರ್ಪಿಎಲ್ ಪ್ರಾಯೋಜಕತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ ಕಾರ್ಯಕ್ರಮ ಉದ್ಘಾಟಿಸಿದರು. ಟ್ರಸ್ಟ್ ಅಧ್ಯಕ್ಷ ಮೋಹನಂಗಯ್ಯ ಸ್ವಾಮಿ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿ ವಾದಿರಾಜ್ ಸಾಮರಸ್ಯ ಮಾತನಾಡಿ, ಶಿಕ್ಷಣದ ಜೊತೆಗೆ ಆರ್ಥಿಕ ಸ್ವಾವಲಂಬನೆಯೂ ಮುಖ್ಯ. ಯುವಕ-ಯುವತಿಯರು ಉದ್ಯಮಶೀಲತೆಯತ್ತ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದರು.
ಎಂಆರ್ಪಿಎಲ್ ನೌಕರರ ಸಂಘದ ಅಧ್ಯಕ್ಷ ಯುವರಾಜ್ ಎಂ.ಕೆ. ಮಾತನಾಡಿ, ಯುವಕರು ಉದ್ಯೋಗ ಅರಸುವವರಾಗದೆ, ಇತರರಿಗೆ ಉದ್ಯೋಗ ನೀಡುವ ಉದ್ಯಮಿಗಳಾಗಿ ಬೆಳೆಯಬೇಕು ಎಂದು ಕರೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಮೋಹನಂಗಯ್ಯ ಸ್ವಾಮಿ ಮಾತನಾಡಿ, ಸರ್ಕಾರದ ವಿವಿಧ ಸಾಲ ಸೌಲಭ್ಯ, ಸಹಾಯಧನ ಹಾಗೂ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಸ್ವಂತ ಉದ್ಯಮ ಸ್ಥಾಪನೆಗೆ ಮುಂದಾಗಬೇಕು ಎಂದು ತಿಳಿಸಿದರು.
ಸಂಪನ್ಮೂಲ ವ್ಯಕ್ತಿಗಳಾದ ಸತೀಶ್ ಮಾಬೆನ್ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ಹನುಮಂತರಾಯ ಅವರು ಬ್ಯಾಂಕ್ ಸಾಲ ಸೌಲಭ್ಯ, ಸರ್ಕಾರಿ ಯೋಜನೆಗಳು, ಸಹಾಯಧನ ಹಾಗೂ ಉದ್ಯಮ ಆರಂಭಿಸುವ ವಿಧಾನಗಳ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಉದ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿದ 16 ಮಂದಿಯನ್ನು ಸನ್ಮಾನಿಸಲಾಯಿತು. ಸುಳ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳ 80ಕ್ಕೂ ಅಧಿಕ ಶಿಬಿರಾರ್ಥಿಗಳು ಭಾಗವಹಿಸಿದ್ದರು. ನಂದರಾಜ್ ಸಂಕೇಶ್, ರಾಜೇಶ್ ವೈ., ಶಂಕರ್ ಪೆರಾಜೆ ಮತ್ತಿತರರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
Next Article
ಯುವವಾಹಿನಿಯ ನೂತನ ಆಡಳಿತ ಕಚೇರಿ ಉದ್ಘಾಟನೆ
ಯುವವಾಹಿನಿಯ ನೂತನ ಆಡಳಿತ ಕಚೇರಿ ಉದ್ಘಾಟನೆ

